ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ (88) ಅವರು ಇಂದು ನಿಧನರಾದರು. ಅದ್ಭುತ ವಾಕ್ ಚಾತುರ್ಯದಿಂದ ಪ್ರಸಿದ್ಧರಾಗಿದ್ದ ಇವರು ಯಕ್ಷಗಾನದಲ್ಲಿ ಪ್ರಾಸಬದ್ಧ ಸಂಭಾಷಣೆಯಿಂದಲೇ ಹೆಸರುವಾಸಿಯಾಗಿದ್ದರು.
ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿಯ ಸುಪುತ್ರರಾಗಿ 1934ನೇ ಮಾರ್ಚ್ 20ರಲ್ಲಿ ಕೇರಳ ರಾಜ್ಯದ ಕುಂಬಳೆಯಲ್ಲಿ ಜನಿಸಿದ್ದರು. ಸುರತ್ಕಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದು 1994 ರಿಂದ 1999ರವರೆಗೆ ಸುರತ್ಕಲ್ ಕ್ಷೇತ್ರದ ಶಾಸಕರಾಗಿದ್ದರು. ಯಕ್ಷಗಾನ ಕಲಾವಿದರೊಬ್ಬರು ನೇರವಾಗಿ ಮತದಾರರಿಂದಲೇ ಆರಿಸಲ್ಪಟ್ಟ ಪ್ರಪ್ರಥಮ ಶಾಸಕರೆಂಬ ಹೆಗ್ಗಳಿಕೆ ಇವರದ್ದು.
ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಕಾರ್ಯ ನಿರ್ವಹಿಸಿದ್ದ ಕುಂಬ್ಳೆ ಸುಂದರ್ ರಾವ್ ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 50ಕ್ಕೂ ಅಧಿಕ ವರ್ಷಗಳ ಕಾಲ ಯಕ್ಷಗಾನದಲ್ಲಿದ್ದ ಕುಂಬ್ಳೆ ಸುಂದರ್ ರಾವ್ ನಿಧನಕ್ಕೆ ಯಕ್ಷ ಕಲಾರಂಗ ಸಂತಾಪ ವ್ಯಕ್ತಪಡಿಸಿದೆ. ನಾಳೆ ಮಂಗಳೂರಿನಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ.
ಇದನ್ನೂ ಓದಿ: ಲೋಹಿತಾಶ್ವ ವಿಧಿವಶ.. 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಹಿರಿಯ ನಟ ಇನ್ನಿಲ್ಲ