ಮಂಗಳೂರು: ರಸ್ತೆ ಅಪಘಾತವೊಂದರಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಉಪಚರಿಸಿ, ಆತನ ಬೈಕನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಲು ಮುಂದಾಗಿದ್ದ ಯುವಕನಿಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಬೈಕಂಪಾಡಿಯಲ್ಲಿ ನಡೆದಿದೆ.
ಮೃತ ಯುವಕ ತೇಜಸ್ (28) ಸುಳ್ಯ ತಾಲೂಕಿನ ಮರ್ಕಜೆಯ ದೊಡ್ಡತೋಟ ನಿವಾಸಿಯಾಗಿದ್ದು, ಮಂಗಳೂರಿನಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ. ನಿನ್ನೆ ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ದ್ವಿಚಕ್ರ ವಾಹವೊಂದು ಅಪಘಾತಕ್ಕೀಡಾಗಿತ್ತು. ಇದನ್ನು ಗಮನಿಸಿದ ತೇಜಸ್, ಗಾಯಾಳುವನ್ನು ಉಪಚರಿಸಿ ಆತನ ಬೈಕ್ನನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಲು ದೂಡಿಕೊಂಡು ಹೋಗುತ್ತಿದ್ದನು.
ಅದೇ ವೇಳೆ ಹಿಂದಿನಿಂದ ವೇಗವಾಗಿ ಬಂದ ಲಾರಿಯೊಂದು ತೇಜಸ್ ದೂಡಿಕೊಂಡು ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದು ವಾಹನದ ಜೊತೆಗೆ ಯುವಕನನ್ನು ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗಿದೆ. ಪರಿಣಾಮ ಘಟನೆಯಲ್ಲಿ ತೇಜಸ್ನ ಸೊಂಟದ ಕೆಳಭಾಗಕ್ಕೆ ಗಂಭೀರ ಗಾಯಗಳಾಗಿತ್ತು. ತಕ್ಷಣ ಆತನನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವಿಪರೀತ ರಕ್ತಸ್ರಾವದಿಂದ ತೇಜಸ್ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸದ್ಯ ಯುವಕನ ಮೃತದೇಹ ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿದ್ದು, ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.