ದಾವಣಗೆರೆ : ಡಿಸೆಂಬರ್ 22ಕ್ಕೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಿಗುವ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಪಂಚಮಸಾಲಿ ಕೂಡಲಸಂಗಮ ಗುರುಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ಪಡೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಡಿ.22ಕ್ಕೆ ಮೀಸಲಾತಿ ಘೋಷಣೆ ಆದರೆ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಒಂದು ವೇಳೆ ನಮ್ಮ ಸಮಾಜಕ್ಕೆ ಮೀಸಲಾತಿ ಘೋಷಣೆ ಆಗದಿದ್ದರೇ ಅದೇ ದಿನ ಬೆಳಗಾವಿ ಸುವರ್ಣ ಸೌಧದ ಎದುರು ಹೋರಾಟ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದರು.
ಸೋಮವಾರ ವಿರಾಟ್ ಪಂಚ ಶಕ್ತಿ ಸಮಾವೇಶ : ಬೆಳಗಾವಿ ನಗರದ ಗಾಂಧಿ ಭವನದಲ್ಲಿ ಸೋಮವಾರ (12.12.2022) ಕ್ಕೆ ವಿರಾಟ ಪಂಚಮ ಶಕ್ತಿ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಮೀಸಲಾತಿ ವಿಚಾರದ ಕುರಿತು ಚರ್ಚೆ ನಡೆಯಲಿದೆ. ಮುಂದಿನ ನಿರ್ಧಾರದ ಬಗ್ಗೆ ಸ್ಪಷ್ಟ ಸಂದೇಶವನ್ನು ಸರ್ಕಾರಕ್ಕೆ ಕಳುಹಿಸಲಾಗುವುದು. ಸಮಾವೇಶದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಜಯಾನಂದ ಕಾಶಪ್ಪನವರ, ಎಂ ಬಿ ಪಾಟೀಲ್ ಸೇರಿದಂತೆ ಪ್ರಮುಖರು ಭಾಗಿ ಆಗಲಿದ್ದಾರೆ ಎಂದು ಸ್ವಾಮೀಜಿ ತಿಳಿಸಿದರು.
ಇದನ್ನೂ ಓದಿ : 2ಎ ಮೀಸಲಾತಿ ಡೆಡ್‌ಲೈನ್ ತಪ್ಪಿದರೆ ಸುವರ್ಣಸೌಧಕ್ಕೆ ಮುತ್ತಿಗೆ: ಜಯಮೃತ್ಯುಂಜಯ ಶ್ರೀ