ದಾವಣಗೆರೆ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜನ ವಿರೋಧಿ ಆಡಳಿತ ವಿರೋಧಿಸಿ ಕಾರ್ಮಿಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಎಐಟಿಯುಸಿ ಕಾರ್ಯಕರ್ತರು ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು.
ಕೇಂದ್ರ ಮಾತ್ರವಲ್ಲ, ರಾಜ್ಯ ಸರ್ಕಾರಗಳು ಕಾರ್ಮಿಕ ವಿರೋಧಿ ನೀತಿ, ರೈತ ವಿರೋಧಿ ನೀತಿಗಳನ್ನು ಜಾರಿ ಮಾಡುವ ಮೂಲಕ ಕಾರ್ಪೊರೇಟ್ ಕಂಪನಿಗಳಿಗೆ ಲಾಭ ಮಾಡಿಕೊಡುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಮಾನವೀಯತೆ ಮರೆತ ಸರ್ಕಾರಕ್ಕೆ ಧಿಕ್ಕಾರ ಸೇರಿ ವಿವಿಧ ಘೋಷಣಾ ಪತ್ರಗಳನ್ನು ಪ್ರದರ್ಶಿಸಿದರು.
ದೇಶದಲ್ಲಿ ಬಡತನ, ನಿರುದ್ಯೋಗ ಹೆಚ್ಚಾಗಿದೆ. ಆದರೆ, ಕೇಂದ್ರ ಸರ್ಕಾರ ಮಾತ್ರ ಯಾವುದೇ ಅಭಿವೃದ್ಧಿಗೆ ಒತ್ತು ನೀಡುತ್ತಿಲ್ಲ. ಶಿಕ್ಷಣ ವ್ಯವಸ್ಥೆ ಕೂಡ ವ್ಯಾಪಾರೀಕರಣ, ಖಾಸಗೀಕರಣ ಮಾಡಿ ಬಡ ಮಕ್ಕಳಿಗೆ ಅನ್ಯಾಯ ಮಾಡಲು ಹೊರಟಿದೆ. ರೈತರಿಗೆ ಸರಿಯಾದ ಯೋಜನೆಗಳನ್ನು ರೂಪಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಜನ ವಿರೋಧಿ ನೀತಿಗಳನ್ನು ಕೈ ಬಿಟ್ಟು ಜನ ಪರವಾದ ಆಡಳಿತ ನೀಡಲು ಮುಂದಾಗಬೇಕು. ಕೊರೊನಾ ಭೀತಿಯಿಂದ ಸಂಕಷ್ಟಕ್ಕೆ ಸಿಲುಕಿದ ಜನರ ಪರವಾಗಿ ನಿಲ್ಲಬೇಕು. ದೇಶದಲ್ಲಿ ಯುವಕರಿಗೆ ಉದ್ಯೋಗಾವಕಾಶಗಳನ್ನು ನೀಡಬೇಕು. ಹಾಗೂ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.