ದಾವಣಗೆರೆ: ದರಿದ್ರ ಸರ್ಕಾರ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಮಾತನಾಡಿದ ಅವರು, ಭಾಗ್ಯ, ಭಾಗ್ಯ ಅಂತಾ ಜನರಿಗೆ ಟೋಪಿ ಹಾಕಿದ್ದಕ್ಕೆ ಅವರನ್ನು ಮನೆಗೆ ಕಳುಹಿಸಿದ್ದಾರೆ ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಸರ್ಕಾರ ಭಾಗ್ಯದ ಹೆಸರಲ್ಲಿ ಕರ್ನಾಟಕದ ಜನರಿಗೆ ಟೋಪಿ ಹಾಕಿದ್ದರು. ಸೋತ ಕಾರಣ ಹತಾಶೆಗೊಂಡು ಈ ರೀತಿ ಮಾತನಾಡುತ್ತಿದ್ದಾರೆ. ಅವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದರು.
ಯಾರ್ಯಾರಿಗೆ ಯಾವ ಖಾತೆ ನೀಡಬೇಕೆಂಬ ಬಗ್ಗೆ ಸಿಎಂ ಯಡಿಯೂರಪ್ಪ ನಿರ್ಧಾರ ಕೈಗೊಳ್ಳುತ್ತಾರೆ. ಈಗಾಗಲೇ ಅವರೇ ಹೇಳಿದ್ದಾರೆ. ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲ್ಲ ಎಂದ ಅವರು ಲ್ಯಾಪ್ ಟಾಪ್ ಉಚಿತವಾಗಿ ನೀಡದಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರ ಯಾವ ರೀತಿ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು.