ದಾವಣಗೆರೆ: ನಗರದ ಮಹಾನಗರ ಪಾಲಿಕೆಯ ಆವರಣದಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಡಿ. ಕೆ. ಶಿವಕುಮಾರ್ ಆಯ್ಕೆಯಾದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು.
ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ. ಬಸವರಾಜ್ ನೇತೃತ್ವದಲ್ಲಿ ಸಿಹಿ ಹಂಚಿ ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಸಿಎಂ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರ ಭಾವಚಿತ್ರಗಳನ್ನು ಹಿಡಿದು ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡರು.
ಈ ವೇಳೆ ಕಾಂಗ್ರೆಸ್ ವರಿಷ್ಠರಿಗೆ ಜೈಕಾರ ಹಾಕಿದರು. ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡುವ ಮೂಲಕ ಹೈಕಮಾಂಡ್ ಒಳ್ಳೆಯ ನಿರ್ಣಯ ತೆಗೆದುಕೊಂಡಿದೆ. ಇದರಿಂದ ಪಕ್ಷಕ್ಕೆ ಬಲಬಂದಿದ್ದು, ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಗೊಳ್ಳಲಿದೆ. ಜೊತೆಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಡಿ. ಬಸವರಾಜ್ ವಿಶ್ವಾಸ ವ್ಯಕ್ತಪಡಿಸಿದರು.