ದಾವಣಗೆರೆ: ಕೊರೊನಾ ಸೋಂಕು ಹರಡುವ ಭೀತಿಯಿದ್ದರೂ ಸಾವಿರಾರು ಜನರನ್ನು ಸೇರಿಸಿ, ಕಾಂಗ್ರೆಸ್ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ. ಇದಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಶಾಸಕ ಎಂ ಪಿ ರೇಣುಕಾಚಾರ್ಯ ಹೇಳಿದರು.
ಜಿಲ್ಲೆಯ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡ ಕಟ್ಟಡ, ವಾಣಿಜ್ಯ ಕಟ್ಟಡದ ಮೇಲಂತಸ್ತು ಮಳಿಗೆಗಳು ಹಾಗೂ ಸಿಸಿ ರಸ್ತೆಗಳ ಉದ್ಘಾಟನಾ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಪ್ರತಿಪಕ್ಷಗಳ ಸಭೆ ಕರೆದಾಗ ಏನೂ ಮಾತನಾಡದೇ ಹೊರಗೆ ಸರ್ಕಾರದ ವಿರುದ್ಧ ಮಾತನಾಡುವ ಕಾಂಗ್ರೆಸ್ ನಾಯಕರಿಗೆ ಮಾನ, ಮರ್ಯಾದೆ ಇಲ್ಲ ಎಂದು ಟೀಕಿಸಿದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ನೂತನ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕೊರೊನಾ ನಿಯಂತ್ರಣ ಸಂಬಂಧ ಸರ್ಕಾರ ಕ್ರಮ ತೆಗೆದುಕೊಂಡಿಲ್ಲ ಎಂಬ ಆರೋಪ ಮಾಡುತ್ತಾರೆ. ಬೆಂಗಳೂರಿನಲ್ಲಿ ಕೊರೊನಾ ಹೆಚ್ಚುತ್ತಿದ್ದರೂ ಇಷ್ಟೊಂದು ಜನರನ್ನು ಸೇರಿಸಿ ಪ್ರತಿಭಟನೆ ನಡೆಸುವ ಔಚಿತ್ಯವೇನಿತ್ತು ಎಂದು ಪ್ರಶ್ನಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ನಡೆಸುವ ಹಕ್ಕಿದೆ. ಆದರೆ, ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಲಿ. ಅದನ್ನು ಬಿಟ್ಟು ಈ ರೀತಿಯ ವರ್ತನೆ ಮಾಡಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.