ದಾವಣಗೆರೆ: ಬೆಲೆ ಏರಿಕೆ ನಿಯಂತ್ರಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಾವಣಗೆರೆ ನಗರದಲ್ಲಿ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಯದೇವ ವೃತ್ತದಲ್ಲಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದ ಕಾರ್ಮಿಕರು, ರೈತರು, ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ವಿರೋಧಿ ನೀತಿಗೆ ಆಕ್ರೋಶ ವ್ಯಕ್ತಪಡಿಸಿದರು.
ಅಸಂಘಟಿತ ಕಾರ್ಮಿಕರಿಗೆ ಶಾಸನಬದ್ಧ ಭವಿಷ್ಯ ನಿಧಿ ಮತ್ತು ಪಿಂಚಣಿ ನೀಡಬೇಕು. ರೈತರ ಬೆಳೆಗಳ ನ್ಯಾಯಯುತ ದರ ನಿಗದಿಗೆ ಡಾ. ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬಲಪಡಿಸಬೇಕು. ರಕ್ಷಣೆ, ಕಲ್ಲಿದ್ದಲು, ಬ್ಯಾಂಕಿಂಗ್, ವಿಮೆ ಸೇರಿದಂತೆ ಇತರೆ ಕ್ಷೇತ್ರಗಳಲ್ಲಿನ ವಿದೇಶಿ ನೇರ ಬಂಡವಾಳ ಹೂಡಿಕೆ ಕೈಬಿಡಬೇಕು ಎಂದು ಒತ್ತಾಯಿಸಿದರು.
ಇನ್ನು ನಗರದ ಜಯದೇವ ವೃತ್ತದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಭಾರತ್ ಬಂದ್ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ರ‍್ಯಾಲಿಯಲ್ಲಿ ಕ್ರಾಂತಿಗೀತೆ ಹಾಡಲಾಯಿತು.