ದಾವಣಗೆರೆ: ಜಿಲ್ಲೆಯ ಹರಿಹರದ ಅಗಸರ ಬೀದಿಯ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿದೆ. ಈಗಾಗಲೇ ಮೂರು ವಿಷಯಗಳ ಪರೀಕ್ಷೆ ಬರೆದಿರುವ ವಿದ್ಯಾರ್ಥಿನಿಯಲ್ಲಿ ಸೋಂಕು ದೃಢಪಟ್ಟಿರುವುದರಿಂದ ಈಕೆ ಜೊತೆ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದ 9 ವಿದ್ಯಾರ್ಥಿಗಳು, ಮೇಲ್ವಿಚಾರಕರು, ಶಿಕ್ಷಕರಲ್ಲಿ ಆತಂಕ ಮನೆ ಮಾಡಿದೆ.
ನಿನ್ನೆ ರಾತ್ರಿಯಿಂದಲೇ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈಕೆ ಕಂಟೇನ್ಮೆಂಟ್ ಝೋನ್ ನಿವಾಸಿ ಆಗಿದ್ದಳು. ಈ ಹಿನ್ನೆಲೆಯಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು. ಈ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟ ಕಾರಣ ಮುಂದಿನ ಪರೀಕ್ಷೆಗೆ ಅವಕಾಶ ಇಲ್ಲ ಎಂದು ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಮಾಹಿತಿ ನೀಡಿದ್ದಾರೆ.