ದಾವಣಗೆರೆ: ಕೊರೊನಾ ನಿಯಂತ್ರಣಕ್ಕೆ ಬರಲು ಎಲ್ಲರ ಸತತ ಪ್ರಯತ್ನವೇ ಕಾರಣ. ಜಿಲ್ಲೆಯ 3 ಕೊರೊನಾ ಪಾಸಿಟಿವ್ ಪ್ರಕರಣಗಳು ನೆಗೆಟಿವ್ ಆಗಿದ್ದು, ಎಲ್ಲರೂ ನಿಟ್ಟುಸಿರು ಬಿಡುವಂತಾಗಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಎದುರಿಸಲು ನಾವು ಹೇಗೆ ಸಜ್ಜಾಗಬೇಕೆಂಬ ಬಗ್ಗೆ ಚಿಂತಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಹೇಳಿದ್ದಾರೆ.
ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕೋವಿಡ್-19 ಸ್ವಯಂ ಸೇವಕರ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾಡಳಿತ, ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳು ಶಕ್ತಿಮೀರಿ ಕಾರ್ಯ ನಿರ್ವಹಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ನಮ್ಮೊಂದಿಗೆ ಕೈ ಜೋಡಿಸಲು ಸ್ವಯಂ ಸೇವಕರು ಮುಂದೆ ಬಂದಿರುವುದು ಅತ್ಯಂತ ಸ್ವಾಗತಾರ್ಹ ಎಂದರು.
ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ನಮ್ಮ ಜಿಲ್ಲೆಯ ಸ್ಥಿತಿ ಉತ್ತಮವಾಗಿದೆ. ಜಿಲ್ಲೆಯಲ್ಲಿ ಹೊರ ಜಿಲ್ಲೆ, ರಾಜ್ಯಗಳಿಂದ ಬಂದವರು 19 ಸಾವಿರ ಜನರಿದ್ದು, ಇವರ ಮೇಲೆ ನಿಗಾ ವಹಿಸುವ ಹೊಣೆ ನಮ್ಮ ಮೇಲಿದೆ ಎಂದರು.
ಡಿಎಚ್‍ಓ ಡಾ. ರಾಘವೇಂದ್ರ ಸ್ವಾಮಿ ಮಾತನಾಡಿ, ಸಾರ್ವಜನಿಕರೆಲ್ಲರೂ ಸಹ ಮಾಸ್ಕ್ ಹಾಕಿಕೊಳ್ಳುವ ಅಗತ್ಯವಿಲ್ಲ. ಜನರೊಂದಿಗೆ ವ್ಯವಹರಿಸುವಾಗ ಹಾಗೂ ಸೋಂಕಿತ ಮತ್ತು ಶಂಕಿತ ವ್ಯಕ್ತಿಗಳ ಹತ್ತಿರವಿರುವಾಗ ಮಾತ್ರ ಮಾಸ್ಕ್ ಬಳಸಿ. ಎನ್ 95 ಮಾಸ್ಕ್ ಅನ್ನು ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು ಬಳಸಬೇಕು. ಸಾಮಾನ್ಯ ಜನರು ಸಾಮಾನ್ಯವಾಗಿರುವ ಮಾಸ್ಕ್ ಬಳಸಿ ಸಾಕು ಎಂದು ಸಲಹೆ ನೀಡಿದರು.