ದಾವಣಗೆರೆ: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಯಾರಿಗೆ ಸಚಿವ ಸ್ಥಾನ ಸಿಗುತ್ತೆ ಎಂಬ ಚರ್ಚೆಗಳು ಈಗಾಗಲೇ ಶುರುವಾಗಿವೆ.
ಜಿಲ್ಲೆಯಲ್ಲಿ ಹಲವು ವರ್ಷಗಳಿಂದಲೂ ಬಿಜೆಪಿ ಪಕ್ಷಕ್ಕೆ ನಿಷ್ಠರಾಗಿರುವ ಮತ್ತು ಸಂಘ ಪರಿವಾರದ ಜೊತೆ ಉತ್ತಮ ಒಡನಾಟ ಹೊಂದಿರುವ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎ.ರವೀಂದ್ರನಾಥ್ ಅವರ ಹೆಸರು ಮೂಂಚೂಣಿಯಲ್ಲಿದೆ. ಸಾದು ಲಿಂಗಾಯತ ಸಮುದಾಯದ ಓರ್ವ ಶಾಸಕ ಬಿಜೆಪಿಯಲ್ಲಿರುವುದರಿಂದ ಇವರಿಗೇ ಸಚಿವ ಸ್ಥಾನ ಸಿಗಬಹುದು ಎಂಬ ಲೆಕ್ಕಾಚಾರ ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ.
1994ರಲ್ಲಿ ಮೊದಲ ಬಾರಿಗೆ ಮಾಯಕೊಂಡ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿ ಶಾಸಕರಾಗಿದ್ದ ಎಸ್.ಎ.ರವೀಂದ್ರನಾಥ್, 2006ರಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದ ಸರ್ಕಾರದಲ್ಲಿ ಸಚಿವರಾಗಿದ್ದರು. ಬಳಿಕ 2008ರಲ್ಲೂ ಐದು ವರ್ಷ ಮಂತ್ರಿಯಾಗಿದ್ದರು. 2013ರ ಚುನಾವಣೆಯಲ್ಲಿ ಸೋಲು ಕಂಡಿದ್ದ ರವೀಂದ್ರನಾಥ್, 2018ರ ಚುನಾವಣೆಯಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ಎಸ್.ಎಸ್.ಮಲ್ಲಿಕಾರ್ಜುನ್ ಅವರನ್ನ ಸೋಲಿಸಿ ಜಯ ಗಳಿಸಿದ್ದರು. ಒಟ್ಟು ಆರು ಬಾರಿ ಶಾಸಕರಾಗಿರುವ ರವೀಂದ್ರನಾಥ್ ಬಿಜೆಪಿಯ ಹಿರಿಯ ನಾಯಕರಾಗಿರುವ ಕಾರಣಕ್ಕೆ ಇವರಿಗೆ ಹೈಕಮಾಂಡ್ ಮಣೆ ಹಾಕುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇನ್ನು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ 2008ರಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದಾಗ ಮೂರೂವರೆ ವರ್ಷಗಳ ಕಾಲ ಅಬಕಾರಿ ಸಚಿವರಾಗಿದ್ದರು. ಜಿಲ್ಲೆಯಲ್ಲಿ ಬಿಜೆಪಿಯ ಆರು ಶಾಸಕರಿದ್ದು, ಇವರಿಬ್ಬರ ಹೆಸರು ಹೆಚ್ಚಾಗಿ ಕೇಳಿ ಬರುತ್ತಿದೆ.
ರೇಣುಕಾಚಾರ್ಯ ಫುಲ್ ಬ್ಯುಸಿ... ರವೀಂದ್ರನಾಥ್ ಕೂಲ್ ಕೂಲ್
ಇನ್ನು ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರ ಪತನ ಆಗೋದು ಖಚಿತವಾಗುತ್ತಿದ್ದಂತೆ ಬೆಂಗಳೂರಿಗೆ ಹೋಗಿದ್ದ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾರ್ಯ ಮತ್ತೆ ಹೊನ್ನಾಳಿಗೆ ಬಂದಿಲ್ಲ. ಬೆಂಗಳೂರಿನಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಯಡಿಯೂರಪ್ಪ ಅವರ ಆಪ್ತರಾಗಿರುವ ರೇಣುಕಾಚಾರ್ಯ ಸಚಿವ ಸ್ಥಾನಕ್ಕೆ ಲಾಬಿ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದ್ರೆ, ಹೈಕಮಾಂಡ್ ನಿರ್ಧಾರದ ಮೇಲೆ ಎಲ್ಲವೂ ನಿಂತಿದೆ ಎಂಬ ಮಾತು ಸಹ ಕೇಳಿ ಬರುತ್ತಿದೆ.
ಇತ್ತ ಎಸ್.ಎ.ರವೀಂದ್ರನಾಥ್ ಫುಲ್ ಕೂಲ್ ಕೂಲ್ ಆಗಿದ್ದು, ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ಹೇಳುತ್ತಿದ್ದಾರೆ. ಈ ಮಧ್ಯೆ ಜಗಳೂರು ಶಾಸಕ ಎಸ್.ವಿ.ರಾಮಚಂದ್ರ ಅವರು ಮಾತ್ರ ಸಚಿವ ಸ್ಥಾನಕ್ಕಿಂತ ಹೆಚ್ಚಾಗಿ ಭದ್ರಾ ಮೇಲ್ದಂಡೆ ಯೋಜನೆಯಡಿ ನೀರು ಸಿಗಬೇಕು. ತಾಲೂಕಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗಿದೆ.