ದಾವಣಗೆರೆ: ಜಿಲ್ಲಾಡಳಿತ ಭವನದ ತುಂಗಾಭದ್ರ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆಯು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧ್ಯಕ್ಷತೆಯಲ್ಲಿ ನಡೆಯಿತು.
ನಕಲಿ ಜಾತಿ ಪ್ರಮಾಣಪತ್ರ ಪಡೆಯುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಅಂಬೇಡ್ಕರ್ ಭವನ ನಿರ್ಮಾಣ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಾದ ತಕ್ಷಣ ಆರೋಪಿಗಳನ್ನು ಬಂಧಿಸುವಂತೆ ಜಿಲ್ಲಾಡಳಿತ ಕ್ರಮ ವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ, ನಾನು ಜಿಲ್ಲಾಧಿಕಾರಿಯಾಗಿ ಬಂದ ನಂತರ ಮೊದಲ ಸಭೆ ಇದಾಗಿದೆ. ತಮ್ಮ ಕುಂದು ಕೊರತೆಗಳನ್ನು ಮುಕ್ತವಾಗಿ ತಿಳಿಸಿ. ನಾನೂ ಸೇರಿದಂತೆ ಅಧಿಕಾರಿಗಳ ತಂಡದಿಂದ ತಮ್ಮ ಮನವಿಗಳನ್ನು ಸಹಾನುಭೂತಿಯಿಂದ ಪರಿಗಣಿಸಲಾಗುವುದು ಎಂದರು.
ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಡಾ. ವೈ.ರಾಮಪ್ಪ ಮಾತನಾಡಿ ಜಿಲ್ಲೆಯಲ್ಲಿ ಪ.ಜಾತಿ ಮತ್ತು ಪ.ಪಂಗಡದವರ ಮೇಲೆ ದೌರ್ಜನ್ಯದ ಪ್ರಕರಣಗಳು ಹೆಚ್ಚುತ್ತಿವೆ. ನಾನೊಬ್ಬ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ. ನನಗೆ ನಗರದ ಪ್ರಮುಖ ವೃತ್ತದಲ್ಲಿ ಚಪ್ಪಲಿ ಹಾರ ಹಾಕುತ್ತಾರೆ. ದೂರು ನೀಡಿ ಸಂಬಂಧಿಸಿದವರನ್ನು ಬಂಧಿಸಲು ಕೋರಿದರೆ, ಪೊಲೀಸರು ಆರೋಪಿಗಳು ಕಣ್ಮರೆಯಾಗಿದ್ದಾರೆ ಎಂದು ಸಬೂಬು ಹೇಳುತ್ತಾರೆ. ಆದರೆ ಪ್ರಕರಣದ ಪ್ರಮುಖ ಆರೋಪಿಗಳು ಮುಖ್ಯ ಸಮಾರಂಭಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಇದು ಹೇಗೆ ಸಾಧ್ಯ? ಇದು ಇಲಾಖೆಯ ವೈಫಲ್ಯವಲ್ಲವೇ?, ನನ್ನಂತಹವನಿಗೆ ಹೀಗೆ ಆದರೆ ಸಾಮಾನ್ಯರ ಗತಿ ಏನು ಎಂದು ಪ್ರಶ್ನಿಸಿದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೀವ್ ಮಾತನಾಡಿ, ನಿಮ್ಮ ಕುಂದು ಕೊರತೆಗಳು ನಮಗೆ ಅರ್ಥವಾಗಿದೆ. ನಮ್ಮ ಇಲಾಖೆಯು 10 ವರ್ಷದಲ್ಲಿ ಸುಮಾರು 349 ಜಾತಿ ನಿಂದನೆ ಕೇಸ್‍ಗಳನ್ನು ದಾಖಲಿಸಿಕೊಂಡಿದ್ದು, ಇಲ್ಲಿ 7 ಜನರಿಗೆ ಮಾತ್ರ ಪರಿಹಾರ ಬರಬೇಕು. ಜೊತೆಗೆ 99 ಕೇಸ್‍ಗಳು ಬಾಕಿ ಇದೆ ಎಂದು ಮಾಹಿತಿ ನೀಡಿದರು.