ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖ ಆಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಸೋಂಕಿಗೆ ಒಳಗಾದ ರೋಗಿಗಳಿಗೆ ವೈದ್ಯಕೀಯ ನೆರವು ನೀಡುವ ಸಲುವಾಗಿ ತೆರೆಯಲಾಗಿದ್ದ ಕೋವಿಡ್ ಕೇರ್ ಸೆಂಟರ್ಗಳನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.
ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕೋವಿಡ್ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತಾನಾಡಿದ ಅವರು, ಸದ್ಯ ಯಾವುದೇ ಕೊರೊನಾ ಪೀಡಿತರು ಈ ಕೋವಿಡ್ ಕೇರ್ ಸೆಂಟರ್ಗಳಲ್ಲಿ ಇಲ್ಲದ ಕಾರಣ ಅವುಗಳನ್ನು ಸ್ಥಗಿತಗೊಳಿಸಬೇಕು. ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿವಿಧ ಇಲಾಖಾ ಸಿಬ್ಬಂದಿಯನ್ನು ವಾಪಸ್ ಮಾತೃ ಇಲಾಖೆಗೆ ಕಳುಹಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಚಳಿಗಾಲದ ದಿನಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುವ ಸುಳಿವಿದ್ದು, ತಕ್ಷಣಕ್ಕೆ ಕೈಗೊಳ್ಳಬೇಕಾದ ಎಲ್ಲಾ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ. ಹಾಗಾಗಿ ಮತ್ತೆ ಅಗತ್ಯ ಬಿದ್ದರೆ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗುವುದು ಎಂದು ಹೇಳಿದರು.
ಎಲ್ಲಾ ಆಸ್ಪತ್ರೆ, ನರ್ಸಿಂಗ್ ಹೋಂಗಳು ತಮ್ಮಲ್ಲಿಗೆ ಬರುವ ರೋಗಿಗಳಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸಬೇಕು. ಒಂದು ವೇಳೆ ಟೆಸ್ಟ್ ಮಾಡಿಸಿಕೊಳ್ಳಲು ನಿರಾಕರಿಸಿದವರಿಗೆ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಾಮಾಜಿಕ ಅಂತರ ಪಾಲಿಸದಿದ್ದರೆ ಕ್ರಮ: ಎಲ್ಲಾ ರೀತಿಯ ವ್ಯಾಪಾರ ವಹಿವಾಟು ನಡೆಸುವ ಸಂಸ್ಥೆಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹಳ ಮುಖ್ಯವಾಗಿದ್ದು, ಈ ಬಗ್ಗೆ ಸಾಕಷ್ಟು ಅರಿವು ಮೂಡಿಸಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚು ಜನಜಂಗುಳಿ ನಡುವೆ ವ್ಯಾಪಾರ ನಡೆಸುವುದು ಕಂಡುಬಂದರೆ 2 ಬಾರಿ ನೋಟಿಸ್ ನೀಡಿ ಮೂರನೇ ಬಾರಿ ಅಂಗಡಿಗಳನ್ನು ನಿರ್ದಾಕ್ಷಿಣ್ಯವಾಗಿ ಮುಚ್ಚಿಸಲಾಗುವುದು. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಬಗ್ಗೆ ಪ್ರತಿನಿತ್ಯ ವರದಿ ನೀಡಬೇಕು. ಎಲ್ಲಿಯಾದರೂ ಅಂತರ ಕಾಯ್ದುಕೊಳ್ಳದ, ಮಾಸ್ಕ್ ಧರಿಸದಿರುವುದು ಕಂಡುಬಂದರೆ ಅಧಿಕಾರಿಗಳನ್ನೇ ನೇರ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಖಡಕ್ ಸೂಚನೆ ನೀಡಿದರು.
ಆತ್ಮನಿರ್ಭರ್ ಯೋಜನೆ ಚುರುಕುಗೊಳಿಸಿ: ಪ್ರಧಾನಮಂತ್ರಿಯವರ ಮಹಾತ್ವಾಕಾಂಕ್ಷಿ ಯೋಜನೆಯಾದ ಆತ್ಮ ನಿರ್ಭರ್ ಯೋಜನೆಯಡಿ ಹೆಚ್ಚು ಹೆಚ್ಚು ಜನರಿಗೆ ಬ್ಯಾಂಕ್ ಮುಖಾಂತರ ಸಾಲಸೌಲಭ್ಯ ನೀಡಬೇಕು. ಬೀದಿಬದಿ ವ್ಯಾಪಾರಿಗಳ ಕಲ್ಯಾಣಕ್ಕಾಗಿ ಆರಂಭಿಸಿರುವ ಯೋಜನೆ ಜಿಲ್ಲೆಯಲ್ಲಿ ಹೆಚ್ಚು ಜನರನ್ನು ತಲುಪುತ್ತಿಲ್ಲ. ಅಧಿಕಾರಿಗಳು ಬ್ಯಾಂಕ್ ಮ್ಯಾನೇಜರ್ಗಳು ಸಹಕರಿಸುತ್ತಿಲ್ಲವೆಂದು ಕೆಲವು ಅಧಿಕಾರಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಬ್ಯಾಂಕ್ ಮ್ಯಾನೇಜರ್ಗಳಿಗೆ ಲೀಡ್ ಬ್ಯಾಂಕ್ ಮ್ಯಾನೇಜರ್ ರವರಿಂದ ಮಾಗದರ್ಶನ ಕೊಡಿಸಿ, ಒಂದು ವೇಳೆ ಯಾವುದೇ ಬ್ಯಾಂಕ್ ಮ್ಯಾನೇಜರ್ ಈ ವಿಚಾರದಲ್ಲಿ ಅಸಡ್ಡೆತನ ಪ್ರದರ್ಶಸಿದರೆ ಅಥವಾ ಸಾಲ ಮಂಜೂರಾತಿಗೆ ಅಸಹಕಾರ ತೋರಿದರೆ ಅವರ ವಿರುದ್ಧ ಸರ್ಕಾರಕ್ಕೆ ನೇರವಾಗಿ ದೂರು ನೀಡಲಾಗುವುದು ಜಿಲ್ಲಾಧಿಕಾರಿ ಬೀಳಗಿ ತಿಳಿಸಿದರು.