ದಾವಣಗೆರೆ: ಕೊರೊನಾ ನಿಯಂತ್ರಣ ಮಾಡಲು ಜಿಲ್ಲಾಡಳಿತ ಮತ್ತೇ ನಿಯಮಗಳನ್ನು ಜನರ ಮೇಲೆ ಹೇರಿದೆ.
ಮದುವೆ, ಜಾತ್ರೆ, ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಜನರು ಸೇರಿದಲ್ಲಿ ಎಫ್‍ಐಆರ್ ದಾಖಲಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೋವಿಡ್ ಲಸಿಕಾಕರಣ ಪ್ರಗತಿ ಮತ್ತು ಕೋವಿಡ್ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯಲ್ಲಿ ಮಾತನಾಡಿದ ಅವರು ಕೊರೊನಾ ಯುದ್ಧ ಇನ್ನೂ ಮುಗಿದಿಲ್ಲ. ಜನರು ಮೈಮರೆತು, ಮದುವೆ, ಜಾತ್ರೆ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅಸಂಖ್ಯಾತ ಸಂಖ್ಯೆಯಲ್ಲಿ ಸೇರುತ್ತಿರುವ ಹಿನ್ನೆಲೆ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಎಲ್ಲರೂ ಸಹಕರಿಸಬೇಕು ಎಂದರು.
ಜನರು ಪ್ರಸ್ತುತ ಕೊರೊನಾ ನಿಯಮಾವಳಿಗಳನ್ನು ಗಾಳಿಗೆ ತೂರಿ ಬದುಕುವ ರೀತಿ ನೋಡುತ್ತಿದ್ದರೆ ಎರಡನೇ ಅಲೆ ದೂರವಿಲ್ಲ ಎನ್ನಿಸುತ್ತಿದೆ. ಸರ್ಕಾರ ಕೂಡ ಈ ಹಿನ್ನೆಲೆ ಮೊದಲಿನಂತೆ ಮದುವೆ, ಜಾತ್ರೆ, ಇತರ ಸಾರ್ವಜನಿಕರು ಸೇರುವ ಕಾರ್ಯಕ್ರಮಗಳಿಗೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯುವುದು ಮತ್ತು ನಿಗದಿತ ಸಂಖ್ಯೆಗಿಂತ ಹೆಚ್ಚು ಜನರು ಸೇರಿದರೆ ಕ್ರಮ ವಹಿಸುವುದಕ್ಕೆ ಸೂಚನೆ ನೀಡಿದೆ ಎಂದರು.