ದಾವಣಗೆರೆ : ಅಪಘಾತದ ವೇಳೆ ಲಾರಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಚಾಲಕನನ್ನು ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಅಗ್ನಿ ಶಾಮಕ ದಳ ಸಿಬ್ಬಂದಿ ರಕ್ಷಿಸಿದ್ದಾರೆ. ಈ ಘಟನೆ ಆನಗೋಡು ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಕಳೆದ ರಾತ್ರಿ 10:45ರ ಸುಮಾರಿಗೆ ಆನಗೋಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಹಿಂದಿದ್ದ ಲಾರಿಯ ಮುಂಭಾಗ ನಜ್ಜುಗುಜ್ಜಾಗಿ ಚಾಲಕ ಗಾಯಗೊಂಡು ಸಿಕ್ಕಿಹಾಕಿಕೊಂಡಿದ್ದ. ಘಟನೆ ಬಗ್ಗೆ ಮಾಹಿತಿ ಪಡೆದ ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಲಾರಿಯೊಳಗೆ ಸಿಕ್ಕಿಹಾಕಿಕೊಂಡು ಒದ್ದಾಡುತ್ತಿದ್ದ ಚಾಲಕನ್ನು ರಕ್ಷಿಸಲು ಮುಂದಾಗಿದ್ದಾರೆ. ಸುಮಾರು 7 ಗಂಟೆಗೂ ಹೆಚ್ಚು ಹೊತ್ತು ಕಾರ್ಯಾಚರಣೆ ನಡೆಸಿದ ರಕ್ಷಣಾ ಸಿಬ್ಬಂದಿ ಚಾಲಕನನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಲಾರಿಯೊಳಗೆ ರಾಸಾಯನಿಕ ತೈಲ ಚೆಲ್ಲಿದ್ದ ಕಾರಣ ರಕ್ಷಣಾ ಕಾರ್ಯಕ್ಕೆ ಅಡ್ಡಿ ಉಂಟಾಗಿತ್ತು ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ.
ಗಾಯಗೊಂಡಿದ್ದ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.