ದಾವಣಗೆರೆ: ಹರಿಹರ, ಚನ್ನಗಿರಿ ಹಾಗು ನ್ಯಾಮತಿಯಲ್ಲಿ ಕಾಣಿಸಿಕೊಂಡಿದ್ದ ಕೊರೊನಾ ಸೋಂಕು ಈಗ ಜಗಳೂರಿಗೂ ಕಾಲಿಟ್ಟಿದ್ದು, ಮೊದಲ ಪ್ರಕರಣ ದಾಖಲಾಗಿದೆ. ಸೋಂಕಿತನ ಪ್ರಯಾಣದ ಇತಿಹಾಸ ಪತ್ತೆ ಹಚ್ಚುವುದು ಜಿಲ್ಲಾಡಳಿತಕ್ಕೆ ಸವಾಲಿನ ಕೆಲಸವಾಗಿದೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 297ಕ್ಕೇರಿದೆ. ಇದುವರೆಗೆ ಒಟ್ಟು 257 ಮಂದಿ ಕೋವಿಡ್ ಆಸ್ಪತ್ರೆಯಿಂದ ಸಂಪೂರ್ಣ ಗುಣಮುಖರಾಗಿ ಬಿಡುಗಡೆ ಹೊಂದಿದ್ದು, 33 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ. ನಿನ್ನೆ ಚನ್ನಗಿರಿಯಲ್ಲಿ ಇಬ್ಬರು, ಹರಿಹರದಲ್ಲಿ 9 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಸೋಮವಾರ 888 ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಸಂಗ್ರಹಿಸಲಾಗಿದೆ. 3,947 ಸ್ಯಾಂಪಲ್‌ಗಳ ವರದಿ ಬರಬೇಕಿದೆ. SARI ಒಟ್ಟು 508 ಪ್ರಕರಣಗಳು ಪತ್ತೆಯಾಗಿದ್ದು 489 ನೆಗೆಟಿವ್ ಬಂದಿದ್ದರೆ, 9 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 10 ಸ್ಯಾಂಪಲ್‌ಗಳ ಪರೀಕ್ಷೆಗೆ ಕಾಯಲಾಗುತ್ತಿದೆ.
ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ
ಜಗಳೂರಿನಲ್ಲಿ ಪತ್ತೆಯಾದ ಕೊರೊನಾ ಸೋಂಕಿತನ ಟ್ರಾವೆಲ್ ಹಿಸ್ಟರಿ ಕಲೆ ಹಾಕಲಾಗುತ್ತಿದೆ. ಶೀತ, ಕೆಮ್ಮು, ಜ್ವರದಂಥ ಲಕ್ಷಣ ಕಂಡು ಬಂದರೆ ಕೂಡಲೇ ಮಾಹಿತಿ ನೀಡುವಂತೆ ಜಿಲ್ಲಾಡಳಿತ ಸಾರ್ವಜನಿಕರಿಗೆ ಸೂಚಿಸಿದೆ. ಆರೋಗ್ಯ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರ ತಂಡ ರಚಿಸಿ ಕಾಯಿಲೆಯಿಂದ ಬಳಲುತ್ತಿರುವವರ ಸರ್ವೇ ನಡೆಸಿ ಮಾಹಿತಿ ನೀಡುವಂತೆಯೂ ಸೂಚಿಸಲಾಗಿದೆ.