ದಾವಣಗೆರೆ : ಕೋವಿಡ್-19 ಹಿನ್ನೆಲೆಯಲ್ಲಿ ಫ್ರಂಟ್‍ಲೈನ್ ವರ್ಕರ್ಗಳಾದ ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಪೊಲೀಸರು ಸೇರಿದಂತೆ ಕೊರೊನಾ ವಾರಿಯರ್ಸ್ ತಮಗೆಲ್ಲಿ ಕೊರೊನಾ ಸೋಂಕು ತಗಲುವುದೆಂಬ ಭಯ ಪಡುವ ಅವಶ್ಯಕತೆ ಇಲ್ಲ. ಗಂಭೀರ ಆರೋಗ್ಯ ಸಮಸ್ಯೆವುಳ್ಳ ಕೊರೊನಾ ಸೋಂಕಿತರನ್ನು ಗುಣಪಡಿಸಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಆದ್ದರಿಂದ ಯಾರೂ ಭಯಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ಹೇಳಿದರು.
ಕೆಲ ಕೊರೊನಾ ವಾರಿಯರ್ಸ್‌ಗಳು ಕೊರೊನಾ ಬರುತ್ತೆ ಎಂದು ಭಯಭೀತರಾಗಿದ್ದಾರೆ ಎಂಬ ಮಾಹಿತಿ ಬಂದಿದೆ. ಯಾರೂ ಅಧೀರರಾಗಬೇಡಿ. ಎರಡೂವರೆ ತಿಂಗಳ ಮಗುವಿನಿಂದ ಹಿಡಿದು 70 ವರ್ಷದ ವೃದ್ಧರೂ ಗುಣಮುಖರಾಗಿದ್ದಾರೆ. ಕೊರೊನಾ ಬಗ್ಗೆ ಭಯ ಬೀಳಬೇಡಿ. ನಿಮ್ಮ ಜೊತೆಗೆ ನಾವಿದ್ದೇವೆ ಎಂದು ಅಭಯ ನೀಡಿದರು.
ಕೊರೊನಾ ಚಿಕಿತ್ಸೆಗೆ ಜಿಲ್ಲೆಯಲ್ಲಿ 5,122 ಬೆಡ್ ಸಿದ್ಧ : ಕೊರೊನಾವನ್ನು ಎದುರಿಸಲು ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಸೇರಿ ಒಟ್ಟು 5,122 ಕೋವಿಡ್-19 ಬೆಡ್‍ಗಳನ್ನು ಸಿದ್ದಪಡಿಸಿಕೊಳ್ಳಲಾಗಿದೆ. ಯಾರೂ ಆತಂಕಕ್ಕೀಡಾಗುವ ಅವಶ್ಯಕತೆ ಇಲ್ಲ. ಸಾಮಾಜಿಕ ಅಂತರ, ವೈಯಕ್ತಿಕ ಎಚ್ಚರಿಕೆಯಿಂದ ಇರಬೇಕೆಂದರು.
ದುರ್ಬಲ ವರ್ಗದವರು, ಸ್ಲಂ, ಕೆಪಿಎಂಇ ಕಾಯ್ದೆಯಡಿ ಖಾಸಗಿ ಆಸ್ಪತ್ರೆ ಮತ್ತು ಮೆಡಿಕಲ್ ಶಾಪ್‍ಗಳಲ್ಲಿ ಔಷಧಿಗಳನ್ನು ತೆಗೆದುಕೊಂಡವರ ಸ್ಯಾಂಪಲ್‍ಗಳು ಸೇರಿ ಒಟ್ಟು 1075 ಜನರ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ತಾಲೂಕುಗಳಲ್ಲೂ ಸ್ವಾಬ್ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಎಂದು ಹೇಳಿದರು.