ಹರಿಹರ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ - ಹರಿಹರ ವಿದ್ಯಾರ್ಥಿಗಳಿಗೆ ಸನ್ಮಾನ
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 623 ಅಂಕ ಗಳಿಸಿ ಕನ್ನಡ ಮಾಧ್ಯಮದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ಎಂ. ಅಭಿಷೇಕ್ ಮತ್ತು 625ಕ್ಕೆ 612 ಅಂಕಗಳಿಸಿ ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಕೆ.ಎಂ. ಕಾವೇರಿ ಇವರಿಬ್ಬರನ್ನು ಸನ್ಮಾನಿಸಲಾಯಿತು.

ಹರಿಹರ: ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್ಎಸ್ಯುಐ) ವತಿಯಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಮ್ಮ ಊರು, ನಮ್ಮ ಹೆಮ್ಮೆ ಎಂಬ ಕಾರ್ಯಕ್ರಮದಡಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 623 ಅಂಕಗಳಿಸಿ ಕನ್ನಡ ಮಾಧ್ಯಮದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ಎಂ. ಅಭಿಷೇಕ್ ಮತ್ತು 625ಕ್ಕೆ 612 ಅಂಕಗಳಿಸಿ ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಕೆ.ಎಂ. ಕಾವೇರಿ ಇವರಿಬ್ಬರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಯು. ಬಸವರಾಜಪ್ಪ ಅವರ ಸಮ್ಮುಖದಲ್ಲಿ ಗೌರವಿಸಲಾಯಿತು.
ನಂತರ ಮಾತನಾಡಿದ ಯು. ಬಸವರಾಜಪ್ಪ, ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಪರೀಕ್ಷೆ ಒಂದು ಮುಖ್ಯ ಘಟ್ಟ. ಕಷ್ಟಪಟ್ಟು ಓದುವ ಮೂಲಕ ತಂದೆ-ತಾಯಿ, ಶಿಕ್ಷಕರು ಹಾಗೂ ಊರಿಗೆ ಕೀರ್ತಿ ತರುವ ಶ್ರೇಷ್ಠ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.