ದಾವಣಗೆರೆ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ವಿಧಿಸಲಾಗಿರುವ ಲಾಕ್‍ಡೌನ್ ಮುಗಿದ ಬಳಿಕ ಭದ್ರಾ ಮೇಲ್ದಂಡೆ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ ಭರವಸೆ ನೀಡಿದರು.
ಜಗಳೂರಿನ ತರಳಬಾಳು ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿ ಅಯೋಜಿಸಿದ್ದ 'ಕೊರೊನಾ ನಿಯಂತ್ರಣ ಕುರಿತ ಪ್ರಗತಿ ಪರಿಶೀಲನಾ ಸಭೆ'ಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವನಾಗಿ ಜಿಲ್ಲೆ ಹಾಗೂ ತಾಲ್ಲೂಕಿನ ಎಲ್ಲೆಡೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸುವುದು ನನ್ನ ಕರ್ತವ್ಯವಾಗಿದೆ ಎಂದರು.
ತಾಲ್ಲೂಕಿನ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾಡಳಿತ ಹೆಚ್ಚಿನ ಒತ್ತು ನೀಡಬೇಕು. ಹದಿನೈದು ದಿನಕೊಮ್ಮೆ ಜಿಲ್ಲೆಗೆ ಭೇಟಿ ನೀಡುತ್ತೇನೆ. ಏನಾದರೂ ಸಮಸ್ಯೆಗಳು ಇದ್ದಲ್ಲಿ ನನ್ನ ಗಮನಕ್ಕೆ ತಂದರೆ ಪರಿಶೀಲನೆ ನಡೆಸುವುದಾಗಿ ಹೇಳಿದರು.
ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಾಗೂ ಕೆಲವು ಸರ್ಕಾರಿ ಇಲಾಖೆ ಅಧಿಕಾರಿಗಳು ಕೋವಿಡ್-19 ವಿರುದ್ಧ ಸರಿಯಾಗಿ ಕರ್ತವ್ಯ ನಿಭಾಯಿಸಬೇಕು. ಇಲ್ಲವಾದಲ್ಲಿ ಅವರ ವಿರುದ್ದ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಜಿಲ್ಲಾಡಳಿತವು ಕೊರೊನಾದಿಂದ ಮುಕ್ತ ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದೆ. 620 ಜನರು ಅವಲೋಕನ ಅವಧಿ ಪೂರ್ಣಗೊಳಿಸಿದ್ದಾರೆ. 28 ದಿನ ಪೂರೈಸಿದವರು 287 ಜನರಿದ್ದಾರೆ. 14 ದಿನ ಅವಧಿ ಪೂರ್ಣಗೊಳಿಸಿದವರು 195 ಜನ ಇದ್ದಾರೆ. ಇದುವರೆಗೆ 562 ಜನರು ತಪಾಸಣೆಗೆ ಒಳಪಟ್ಟಿದ್ದಾರೆ. ಅದರಲ್ಲಿ 502 ನೆಗೆಟಿವ್ ಬಂದಿದೆ. ಜಿಲ್ಲೆಯಲ್ಲಿ 3 ಪಾಸಿಟಿವ್ ಕೇಸ್ ಬಂದಿದ್ದು, ಈಗಾಗಲೇ ಅವರೆಲ್ಲರೂ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ ಎಂದು ಮಾಹಿತಿ ನೀಡಿದರು.
ತಾಲ್ಲೂಕು ಆಸ್ಪತ್ರೆಗಳಲ್ಲಿ ಹೆಚ್ಚುವರಿ 100 ಬೆಡ್, ಲ್ಯಾಬ್ ವ್ಯವಸ್ಥೆ ಮಾಡಲಾಗುವುದು. ಮೇ ತಿಂಗಳಿಗೆ ಬೇಕಾದ ಆಹಾರ ದಾಸ್ತಾನು ಇರಿಸಲಾಗಿದೆ. ಗ್ರಾಮೀಣ ಭಾಗದಲ್ಲಿನ ಶಾಲಾ ಮಕ್ಕಳಿಗೆ ಪಡಿತರ ಹಾಗೂ ಹಾಲು ನೀಡಲಾಗಿದೆ. ತರಕಾರಿ, ದಿನಸಿ, ಬಿತ್ತನೆ ಬೀಜ ರಸಗೊಬ್ಬರಳಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ಸಚಿವರಿಗೆ ಜಿಲ್ಲೆಯ ಪರಿಸ್ಥಿತಿ ವಿವರಿಸಿದರು.