ಬೆಂಗಳೂರು: ದಾವಣಗೆರೆ ಜಿಲ್ಲೆಯ ಭದ್ರಾ ಜಲಾಶಯ ಬಲದಂಡೆ ಕಾಲುವೆಯಲ್ಲಿ ಅಕ್ರಮ ಪಂಪ್ ಸೆಟ್ ಅಳವಡಿಸಿರುವುದನ್ನು ತೆರವುಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯಿಸಲು ಹೈಕೋರ್ಟ್ ನೀರಾವರಿ ಇಲಾಖೆ ಹಾಗೂ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿ ಉತ್ತರ ನೀಡುವಂತೆ ಸೂಚಿಸಿದೆ.
ಈ ಕುರಿತು ಎಂ.ತಿಪ್ಪೇರುದ್ರಪ್ಪ ಸೇರಿದಂತೆ ಭದ್ರಾ ಕಾಲುವೆಯ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆಯು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಅರ್ಜಿದಾರರ ಪರ ವಾದಿಸಿದ ವಕೀಲರು ಭದ್ರಾ ಯೋಜನೆಯ ಬಲದಂಡೆಗೆ ಅಕ್ರಮ ಪಂಪ್‌ಸೆಟ್‌ಗಳನ್ನು ಅಳವಡಿಸುತ್ತಿದ್ದು ಇದರಿಂದ ಗ್ರಾಮದ ರೈತರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಅಕ್ರಮ, ಅನಧಿಕೃತವಾಗಿ ಅಳವಡಿಸಿರುವ ಸಾವಿರಾರು ಪಂಪ್‌ಸೆಟ್‌ಗಳನ್ನು ತೆರವುಗೊಳಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.
ವಕೀಲರ ವಾದ ಆಲಿಸಿದ ನ್ಯಾಯಪೀಠವು ನೀರಾವರಿ ಇಲಾಖೆ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ ವಿಚಾರಣೆಯನ್ನು ಮುಂದೂಡಿದೆ.