ದಾವಣಗೆರೆ: ಕೇವಲ ಕಾಂಗ್ರೆಸ್ ನಾಯಕರು ಮತ್ತು ಅವರ ಆಪ್ತರ ಮನೆ ಮೇಲೆ ಮಾತ್ರ ಐಟಿ ದಾಳಿ ನಡೆಯುತ್ತಿದೆ. ಆದ್ರೆ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರ ಮನೆ ಮೇಲೆ ಯಾಕೆ ಆದಾಯ ತೆರಿಗೆ ಇಲಾಖೆ ರೇಡ್ ಮಾಡುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯದರ್ಶಿ ಡಿ.ಬಸವರಾಜ್ ಪ್ರಶ್ನಿಸಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಆರ್.ಅಶೋಕ್, ಕೆ.ಎಸ್.ಈಶ್ವರಪ್ಪ ಸೇರಿದಂತೆ ಬಿಜೆಪಿಯ ನಾಯಕರ ಮೇಲೆ ಆಪಾದನೆಗಳಿವೆ. ಕೇವಲ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ನಾಯಕರನ್ನು ಗುರಿಯಾಗಿಟ್ಟುಕೊಂಡು ದಾಳಿ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಐಟಿ, ಜಾರಿ ನಿರ್ದೇಶನಾಲಯ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಬೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ವಿರುದ್ಧ ಚಿತ್ರದುರ್ಗದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಮೊಕದ್ದಮೆ ದಾಖಲಿಸಿರುವುದು ಖಂಡನೀಯ. ಬಿಜೆಪಿ ಬೆಂಬಲಿಸಲಿಲ್ಲ ಎಂಬ ಕಾರಣಕ್ಕೆ ದಾಖಲಿಸಿರುವ ಕೇಸ್ಅನ್ನು ಕೂಡಲೇ ವಾಪಾಸ್ ಪಡೆಯಬೇಕು. ಚಿತ್ರದುರ್ಗ ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲು ಬೋವಿ ಸಮಾಜದವರಿಗೆ ಮೋಸ ಮಾಡಲಾಗಿದೆ. ಇದು ಖಂಡನೀಯ ಎಂದು ಹೇಳಿದರು.
ಚುನಾವಣಾ ಆಯೋಗ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳಿಗೆ ಈ ಬಗ್ಗೆ ನೋಟಿಸ್ ನೀಡಿ ಮಾಹಿತಿ ಪಡೆಯಬಹುದಾಗಿತ್ತು. ಆದರೆ ಏಕಾಏಕಿ ದೂರು ದಾಖಲಿಸಿರುವುದು ಸರಿಯಲ್ಲ. ಈ ವಿಚಾರದಲ್ಲಿ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಬೇಕು. ಬೋವಿ ಸಮಾಜಕ್ಕಾಗಿ ಶ್ರಮಿಸುತ್ತಿರುವ ಶ್ರೀಗಳು ರಾಜಕೀಯ ಬಗ್ಗೆ ಮಾತನಾಡಬಾರದೆಂದು ಎಚ್ಚರಿಸುವ ಮತ್ತು ಕಿರುಕುಳ ನೀಡುವ ಕುತಂತ್ರ ನಡೆಸುತ್ತಿರುವ ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.