ದಾವಣಗೆರೆ : ಶಿಷ್ಯವೇತನಕ್ಕೆ ಬಿಗಿ ಪಟ್ಟು ಹಿಡಿದಿರುವ ಜೆಜೆಎಂ ಮೆಡಿಕಲ್ ಕಾಲೇಜಿನ ವೈದ್ಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಕೋವಿಡ್ ಹೊರತುಪಡಿಸಿ ಉಳಿದ ಸೇವೆಗಳನ್ನು ಬಹಿಷ್ಕರಿಸಿ ಹೋರಾಟ ಮುಂದುವರಿಸಿದ್ದಾರೆ.
ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಭವಿಷ್ಯದಲ್ಲಿ ಆಗುವ ಎಲ್ಲಾ ಅನಾಹುತಗಳಿಗೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ. ಕಳೆದ 14 ದಿನಗಳಿಂದ ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದೇವೆ. ಸಹನೆ ಪರೀಕ್ಷಿಸಬೇಡಿ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ಸುಮಾರು 230 ವೈದ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು ನಿತ್ಯದ ಖರ್ಚಿಗೂ ಪರದಾಡುತ್ತಿದ್ದೇವೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ್ದೇವೆ. ಹಗಲು ರಾತ್ರಿಯೆನ್ನದೆ ಕೆಲಸ ಮಾಡಿದ್ದೇವೆ. ಇಷ್ಟಾದರೂ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸದೇ ಇರುವುದು ಬೇಸರ ತರಿಸಿದೆ ಎಂದರು.
ಕಾಲೇಜಿನ ಆಡಳಿತ ಮಂಡಳಿ ಯಾವುದೇ ಕಾರಣಕ್ಕೂ ಶಿಷ್ಯವೇತನ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಸರ್ಕಾರ ಆದಷ್ಟು ಬೇಗ ನಮ್ಮ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.