ದಾವಣಗೆರೆ: ಮುಂದಿನ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಭರ್ಜರಿ ತಯಾರಿ ಆರಂಭವಾಗಿದ್ದು, ಅಹಿಂದ ನಾಯಕ ಎಂದು ಗುರುತಿಸಿಕೊಂಡಿರುವ ಮಾಜಿ ಸಿಎಂ ಸಿದ್ದರಾಮಯ್ಯನವರ ಬೆಂಬಲಕ್ಕೆ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ನಿಂತಿದೆ.
ನಿನ್ನೆ ಜಿಲ್ಲಾಧಿಕಾರಿ ಕಚೇರಿ ಬಳಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಹಮ್ಮಿಕೊಂಡಿದ್ದ ಹೋರಾಟದಲ್ಲಿ ರಾಜ್ಯಾದಂತ 192 ಜಾತಿಯ ಮುಖಂಡರು ಭಾಗಿಯಾಗಿದ್ದರು.
ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮಾಡಲಾಗಿದ್ದ ಕಾಂತರಾಜ್ ಆಯೋಗದ ಜಾತಿವಾರು ಸಮೀಕ್ಷೆ ವರದಿಯನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂಬ ಕೂಗು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಕೇಳಿಬಂದಿದೆ. ಸತತ ಏಳು ಜಿಲ್ಲೆಗಳಲ್ಲಿ ನಡೆದಿರುವ ಅಹಿಂದ ಹೋರಾಟ ಇದೀಗ ದಾವಣಗೆರೆಗೆ ಸಹ ಲಗ್ಗೆ ಇಟ್ಟಿದ್ದು, ಬಹಿರಂಗವಾಗಿ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಬಾಹ್ಯ ಬೆಂಬಲ ನೀಡುವುದಾಗಿ ಕರೆ ನೀಡಲಾಯಿತು.
ಬಹುದೊಡ್ಡ ಸಮಾಜಗಳಿಗೆ ಮೀಸಲಾತಿ ನೀಡಲು ಬಿಜೆಪಿ ಸರ್ಕಾರ ಸಿದ್ಧತೆ ನಡೆಸಿರುವುದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಸಿದ್ದರಾಮಯ್ಯನವರು ಜಾರಿ ಮಾಡಿದ್ದ 192 ಹಿಂದುಳಿದ ಜಾತಿಗಳ ಗಣತಿ ವರದಿಯನ್ನು ಕೂಡಲೇ ಜಾರಿ ಮಾಡಬೇಕು, ಜಾರಿಮಾಡುವ ತನಕ ಬಿಡುವುದಿಲ್ಲ ಎಂದು ಸರ್ಕಾರಕ್ಕೆ ಹೋರಾಟಗಾರರು ಎಚ್ಚರಿಕೆ ನೀಡಿದರು. ನಂತರ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಯವರಿಗೆ ಮನವಿ ಸಲ್ಲಿಸಲಾಯಿತು.