ದಾವಣಗೆರೆ : ಭಿನ್ನಮತೀಯ ಚಟುವಟಿಕೆ ನಡೆಸುತ್ತಿರುವ ಶಾಸಕ ಉಮೇಶ್ ಕತ್ತಿ ಹಾಗೂ ಮುರುಗೇಶ್ ನಿರಾಣಿ ಜೊತೆ ಬೆಂಗಳೂರಿಗೆ ಹೋದಾಗ ಮಾತನಾಡುವೆ ಎಂದು ಸಂಸದ ಸಿದ್ದೇಶ್ವರ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಾನು ಉಳಿದುಕೊಳ್ಳುವ ಹೋಟೆಲ್ನಲ್ಲಿಯೇ ಉಮೇಶ್ ಕತ್ತಿ, ನಿರಾಣಿ ವಾಸ್ತವ್ಯ ಹೂಡುತ್ತಾರೆ. ಅಲ್ಲಿ ಜೊತೆಯಾಗಿಯೇ ವಾಕಿಂಗ್ ಮಾಡ್ತೇವೆ ಆ ಸಂದರ್ಭದಲ್ಲಿ ನಾನು ಅವರ ಜೊತೆ ಮಾತಾಡ್ತೇನೆ ಎಂದರು.
ಉಮೇಶ್ ಕತ್ತಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಕಾರಣಕ್ಕೆ ಅಸಮಾಧಾನ ಇದೆ. ಕೊರೊನಾ ಸಂಕಷ್ಟ ಮುಗಿದ ಬಳಿಕ ಸಂಪುಟ ವಿಸ್ತರಣೆಯಾಗಲಿದೆ. ಆಗ ಸೂಕ್ತ ಸ್ಥಾನಮಾನ ಸಿಗಲಿದೆ. ಅಲ್ಲಿಯವರೆಗೆ ತಾಳ್ಮೆಯಿಂದ ಇರಬೇಕು ಎಂದರು.
ರಾಜ್ಯ ಬಿಜೆಪಿಯಲ್ಲಿ ಯಾವುದೇ ಅಸಮಾಧಾನವಿಲ್ಲ, ಎಲ್ಲ ಸಮಸ್ಯೆಗಳು ಶಮನವಾಗಲಿವೆ. ಯಡಿಯೂರಪ್ಪ ಪ್ರಶ್ನಾತೀತ ನಾಯಕ. ಮೂರು ವರ್ಷ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಇಡೀ ದೇಶವೇ ಮೆಚ್ಚುವಂತೆ 78 ವರ್ಷ ವಯಸ್ಸಿನ ಯಡಿಯೂರಪ್ಪ ಕೊರೊನಾ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದರು,
ಬಸನಗೌಡ ಪಾಟೀಲ್ ಯತ್ನಾಳ್ ಬಹಿರಂಗ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಶಿಸ್ತು ಉಲ್ಲಂಘಿಸುವವರ ವಿರುದ್ಧ ಪಕ್ಷದ ಕೇಂದ್ರ ಹಾಗೂ ರಾಜ್ಯ ವರಿಷ್ಠರು ಕ್ರಮಕೈಗೊಳ್ಳುತ್ತಾರೆ. ಈ ಬಗ್ಗೆ ನಾನು ಹೆಚ್ಚೇನೂ ಹೇಳಲು ಆಗದು ಎಂದಿದ್ದಾರೆ.