ದಾವಣಗೆರೆ: ಹೊನ್ನಾಳಿಯ ಹಿರಿಯ ಸಹಾಯಕ ತೋಟಗಾರಿಕೆ ಇಲಾಖೆ ಕಚೇರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ದಿಢೀರ್ ಭೇಟಿ ನೀಡಿದರು. ಈ ವೇಳೆ ಹನ್ನೊಂದು ಗಂಟೆಯಾದರೂ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಉದ್ಯೋಗ ಖಾತ್ರಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಸರಿಯಾದ ಸಮಯಕ್ಕೆ ಅಧಿಕಾರಿಗಳು ಕಚೇರಿಗೆ ಬರುತ್ತಿಲ್ಲ. ಏಜೆಂಟರ್ಗಳ ಹಾವಳಿ ಜಾಸ್ತಿಯಾಗಿದ್ದು, ರೈತರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪ ಪದೇ ಪದೆ ಕೇಳಿ ಬರುತಿತ್ತು. ಈ ಹಿನ್ನೆಲೆ ದಿಢೀರ್ ಭೇಟಿ ನೀಡಿ ಸರಿಯಾಗಿ ಕೆಲಸ ಮಾಡದ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಇನ್ನು, ಇಬ್ಬರೂ ಅಧಿಕಾರಿಗಳಿಗೆ ಇಲಾಖೆಯಿಂದ ನೋಟಿಸ್ ಕೊಟ್ಟರೂ ಪ್ರತಿಕ್ರಿಯೆ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಸಸ್ಪೆಂಡ್ ಮಾಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.