ದಾವಣಗೆರೆ: ಮಳೆಯಿಂದ ರಸ್ತೆಗಳು ಹಾಳಾಗಿದ್ದು, ಗ್ರಾಮಸ್ಥರು ರಸ್ತೆಯಲ್ಲಿ ಭತ್ತದ ಸಸಿ ನಾಟಿ ಮಾಡಿ ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿದೆ.
ಹರಿಹರ ತಾಲೂಕಿನಲ್ಲಿ ಹೆಚ್ಚು ಮಳೆ ಬೀಳುತ್ತಿರುವುದರಿಂದ 22 ವರ್ಷಗಳಿಂದ ರಸ್ತೆ ಹಾಳಾಗಿದ್ದು, ಶಾಲಾ ಮಕ್ಕಳಿಗೆ, ವೃದ್ಧರು, ಮಹಿಳೆಯರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಹೀಗಾಗಿ ಜನ ಹೈರಾಣಾಗಿದ್ದಾರೆ.
ಹರಿಹರದಿಂದ ಪಾಳ್ಯ ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸುವ ಹದೆಗೆಟ್ಟ ರಸ್ತೆ ಬಗ್ಗೆ ಪಾಳ್ಯ ಗ್ರಾಮದ ಜನರು ಜನಪ್ರತಿನಿಧಿಗಳ ಗಮನಕ್ಕೆ ತಂದ್ರು ಯಾವುದೇ ಪ್ರಯೋಜನ ಆಗಿಲ್ಲ. ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ ಹಾಗೂ ಬೇಜಾವಬ್ದಾರಿತನ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಕೂಡಲೇ ರಸ್ತೆ ದುರಸ್ತಿ ಮಾಡುವಂತೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ, ರಸ್ತೆಯಲ್ಲಿದ್ದ ಕೆಸರಿನಲ್ಲಿ ಭತ್ತದ ಸಸಿ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ರು. ಹರಿಹರ ಶಾಸಕ ಎಸ್. ರಾಮಪ್ಪ ಜನರ ಸಮಸ್ಯೆಗೆ ಸ್ಪಂದಿಸದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.