ದಾವಣಗೆರೆ: ಉತ್ತರಪ್ರದೇಶದ ಹಥ್ರಾಸ್ನ ದಲಿತ ಯುವತಿ ಮೇಲಿನ ಅತ್ಯಾಚಾರ, ಹತ್ಯೆ ಖಂಡಿಸಿ ಎಲ್.ಜಿ.ಹಾವನೂರು ಹೋರಾಟ ಸಮಿತಿ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಉತ್ತರಪ್ರದೇಶದ ಹಥ್ರಾಸ್ ಜಿಲ್ಲೆಯ ಹಳ್ಳಿಯೊಂದರಲ್ಲಿ ದಲಿತ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರವು ವಿವಾದದ ಬಿರುಗಾಳಿ ಎಬ್ಬಿಸಿದೆ. ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಯುವತಿಯ ಮೃತದೇಹವನ್ನು ಯುವತಿಯ ತಂದೆ - ತಾಯಿ, ಬಂಧುಗಳಿಗೆ ತಿಳಿಸದೆ ಏಕಾಏಕಿಯಾಗಿ ಪೊಲೀಸರು ಸುಟ್ಟು ಹಾಕಿದ್ದಾರೆ. ಇದು ತಪ್ಪಿತಸ್ಥರನ್ನು ರಕ್ಷಿಸುವ ಕೆಲಸವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಮೃತಳ ಕುಟುಂಬದವರಿಗೆ ಬೆದರಿಸಿದ್ದಾರೆ. ಉತ್ತರಪ್ರದೇಶ ಸರ್ಕಾರವು ವಿರೋಧ ಪಕ್ಷಗಳು, ಸಂಘ - ಸಂಸ್ಥೆಗಳು ಹಾಗೂ ಮಾಧ್ಯಮದವರಿಗೆ ಗ್ರಾಮದೊಳಗೆ ಪ್ರವೇಶ ನಿರಾಕರಿಸುವ ಮೂಲಕ ಹಿಟ್ಲರ್ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಆರೋಪಿಗಳನ್ನು ಗಲ್ಲಿಗೇರಿಸಬೇಕು. ಯುವತಿಯ ಕುಟುಂಬದವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.