ಕಲಬುರಗಿ/ದಾವಣಗೆರೆ : ಜಾಮೀಯ ಮತ್ತು ಅಲಿಘರ್ ಮುಸ್ಲಿಂ ವಿವಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಕಲಬುರಗಿಯಲ್ಲಿ ಎಐಡಿಎಸ್ಒ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಸರ್ದಾರ್ ಪಟೇಲ್ ವೃತ್ತದಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ಹೋದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ ಎಂದು ಆರೋಪಿಸಿದ್ರು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಪೌರತ್ವ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿದರು.
ಇತ್ತ ದಾವಣಗೆರೆಯಲ್ಲಿ ಕೂಡ ನಾಗರಿಕತ್ವ ಮಸೂದೆ ವಿರೋಧಿಸಿ ಹಾಗೂ ಜಾಮೀಯಾ ಮಿಲಿಯಾ ಇಸ್ಲಾಂಮಿಯಾ ವಿವಿ ಹಾಗೂ ಅಲಿಘರ್ ವಿವಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿರುವ ಗುಂಡಿನ ದಾಳಿಯನ್ನು ಖಂಡಿಸಿ ದಾವಣಗೆರೆಯಲ್ಲಿ ಎಐಡಿಎಸ್‌ಒ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿತು. ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಜಾಮೀಯಾ ವಿವಿಯ ವಿದ್ಯಾರ್ಥಿಗಳು ತಮ್ಮ ಬೇಡಿಕೆಗಳಿಗಾಗಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ರೂ ಪೊಲೀಸರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ಮಾಡಿದ್ರು.
ಈ ವೇಳೆ ಮಾತನಾಡಿದ ಪ್ರತಿಭಟನಾನಿರತರು, ಪ್ರತಿಭಟನಾಕಾರರಲ್ಲಿ ಹಲವರು ಗುಂಡೇಟಿಗೆ ತುತ್ತಾಗಿ ಗಾಯಗೊಂಡು ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಈ ದಿನ ದೇಶದ ವಿದ್ಯಾರ್ಥಿ ಚಳವಳಿಯ ಇತಿಹಾಸದಲ್ಲಿ ಕರಾಳವಾದ ದಿನವಾಗಿದೆ. ಇಂತಹ ದಾಳಿಗಳ ಹೊಣೆಗಾರರಾಗಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.