ದಾವಣಗೆರೆ: ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಶೇಷ (ಪೋಕ್ಸೋ) ನ್ಯಾಯಾಲಯ ತೀರ್ಪು ನೀಡಿದೆ.
ನಗರದ ಇಮಾಂ ನಗರದ ವಾಸಿ ಸಾಧಿಕ್ (33) ಶಿಕ್ಷೆಗೆ ಗುರಿಯಾದವ. ಮೇ 19, 2019ರಂದು ಮಧ್ಯಾಹ್ನ 3ರ ವೇಳೆ ನಗರದ ಕಟ್ಟೆಯೊಂದರ ಬಳಿ ಆಟವಾಡುತ್ತಿದ್ದ 8 ವರ್ಷದ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿದ್ದ. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ಸಾಧಿಕ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಓದಿ: ಬೆಳಗಾವಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಗೋಳಾಟ: ಊಟ ನೀಡಿ ಮಾನವೀಯತೆ ಮೆರೆದ ಸಾರಿಗೆ ನೌಕರರು
ಪ್ರಕರಣದ ವಿಚಾರಣೆ ನಡೆಸಿದ ಮಹಿಳಾ ಠಾಣೆಯ ವೃತ್ತ ನಿರೀಕ್ಷಕಿ ಪ್ರಭಾವತಿ ಶೇತಾಸನದಿ ಹಾಗೂ ಸಿಬ್ಬಂದಿ, ಆರೋಪಿಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ (ಪೋಕ್ಸೋ) ಆರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆದು ಆರೋಪಿ ಸಾಧಿಕ್ ಅಪರಾಧಿ ಎಂದು ಸಾಬೀತಾದ ಹಿನ್ನೆಲೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ವಿಶೇಷ (ಪೋಕ್ಸೋ) ನ್ಯಾಯಾಲಯದ ನ್ಯಾಯಾಧೀಶರಾದ ಎಸ್.ನಾಗಶ್ರೀ ಅವರು ಅಪರಾಧಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದರು. ಸರ್ಕಾರದ ಪರ 2ನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ಎಸ್.ಹೆಚ್.ಎಸ್.ಶೌಕತ್ ಅಲಿ ವಾದ ಮಂಡಿಸಿದ್ದರು.