ದಾವಣಗೆರೆ : ಜಿಲ್ಲೆಯ ಆರು ತಾಲೂಕು ಕೇಂದ್ರಗಳಲ್ಲಿ ನಾಳೆ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯಲಿದೆ. ಶಾಂತಿ ಕಾಪಾಡುವ ದೃಷ್ಠಿಯಿಂದ ಡಿ. 30 ಹಾಗೂ 31ರಂದು ಜಿಲ್ಲೆಯಾದಂತ್ಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಮತ ಎಣಿಕೆ ಕಾರ್ಯ ಸುಸೂತ್ರವಾಗಿ ನಡೆಯಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಜಿಲ್ಲೆಯಲ್ಲಿ ಸೆ. 144 ಘೋಷಿಸಿದ್ದು, ಡಿ.30ರ ಬೆಳಗ್ಗೆ 6 ಗಂಟೆಯಿಂದ ಡಿ.31ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.
ನಿಷೇಧಾಜ್ಞೆ ಇರುವ ಸಮಯದಲ್ಲಿ ಜಯಶಾಲಿಯಾದ ಅಭ್ಯರ್ಥಿಗಳು ಮೆರವಣಿಗೆ ಮಾಡುವುದು ಹಾಗೂ ಸಭೆ, ಸಮಾರಂಭ ನಡೆಸುವುದರ ಜೊತೆಗೆ ಪಟಾಕಿ ಸಿಡಿಸುವುದು ಹಾಗೂ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ.
ಜಿಲ್ಲೆಯಾದಂತ್ಯ ಮದ್ಯ ಮಾರಾಟ ನಿಷೇಧ : ಡಿ.30ರಂದು ಜಿಲ್ಲೆಯಲ್ಲಿ ಮದ್ಯ ಮಾರಾಟ ಹಾಗೂ ಸರಬರಾಜನ್ನು ನಿಷೇಧ ಮಾಡಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶ ಹೊರಡಿಸಿದ್ದಾರೆ. ಗ್ರಾಪಂ ಚುನಾವಣೆಯ ಮತ ಎಣಿಕೆ ಕಾರ್ಯಗಳು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ.
ಮತ ಎಣಿಕೆ ದಿನ ಫಲಿತಾಂಶಗಳು ಹಂತ ಹಂತವಾಗಿ ಹೊರ ಬರುತ್ತಿದ್ದಂತೆಯೇ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರ ಮಧ್ಯೆ ಮಾತಿನ ಚಕಮಕಿ ಮತ್ತು ಗುಂಪು ಘರ್ಷಣೆ ನಡೆದು ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಆಗುವ ಸಾಧ್ಯತೆ ಇರುತ್ತೆ. ಅದನ್ನು ತಡೆಯಲು ಮುಂಜಾಗ್ರತಾ ಕ್ರಮವಾಗಿ ಡಿ.30ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ದಾವಣಗೆರೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.