ದಾವಣಗೆರೆ: ವಾಲ್ಮೀಕಿ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ಬೇಕೇ ಬೇಕು ಇಲ್ಲವಾದ್ರೆ, ಉಪಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು ಎಂದು ವಾಲ್ಮೀಕಿ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯ ಹರಿಹರದ ತಾಲ್ಲೂಕಿನ ರಾಜನಹಳ್ಳಿ ವಾಲ್ಮೀಕಿ ಪೀಠದಲ್ಲಿ ಮಾತನಾಡಿದ ಅವರು, ಈಗಿನ ಸಚಿವ ಸಂಪುಟದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಸೂಕ್ತ ರಾಜಕೀಯ ಸ್ಥಾನಮಾನ ಸಿಕ್ಕಿಲ್ಲ. ಅದರಲ್ಲೂ ವಾಲ್ಮೀಕಿ ಸಮುದಾಯಕ್ಕೆ ಡಿಸಿಎಂ ಪಟ್ಟ ಸಿಗುತ್ತದೆ ಎನ್ನುವ ನಿಟ್ಟಿನಲ್ಲಿ 60 % ರಿಂದ 70% ಜನ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಈ ಬಾರಿ ಅಲ್ಲದಿದ್ದರೂ ಮುಂದಿನ ಸಚಿವ ಸಂಪುಟ ವಿಸ್ತರಣೆಯಾದ ನಂತರ ಸಿಗಬಹುದು ಎನ್ನುವ ನಿರೀಕ್ಷೆ ಇದೆ ಎಂದರು.
ಬೇರೆ ಸಮುದಾಯಕ್ಕೆ ಸಿಕ್ಕ ಸ್ಥಾನಮಾನ ನಮಗೆ ಸಿಕ್ಕಿಲ್ಲ. ನಮ್ಮ ಸಮುದಾಯದ ಒಂಬತ್ತು ಜನ ಶಾಸಕರಿದ್ದು ಮೂರು ಜನರಿಗೆ ಸಚಿವ ಸ್ಥಾನ ಸಿಗಬೇಕಿತ್ತು ಆದ್ರೆ ಸಿಕ್ಕಿಲ್ಲ. ಕೇವಲ ಬಸವಣ್ಣನವರ ಸಮಾನತೆ ವಿಷಯವನ್ನು ಬಾಯಿ ಮಾತಿನಲ್ಲಿ ಹೇಳಿದರೆ ಸಾಲದು, ನಮ್ಮ ಸಮುದಾಯದ ಯಾರಿಗಾದ್ರು ಒಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಒಂದು ವೇಳೆ ಬಿಜೆಪಿ ಹೈಕಮಾಂಡ್ ನೀಡದಿದ್ದರೆ ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿಗೆ ತಕ್ಕಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.