ದಾವಣಗೆರೆ: ಸಾರ್ವಜನಿಕರು ತಮ್ಮ ಕುಂದು ಕೊರತೆಗಳು ಹಾಗೂ ಸಲಹೆಗಳನ್ನು ಪತ್ರದ ಮೂಲಕ ಕಾನೂನು ಸೇವಾ ಸಲಹಾ ಪೆಟ್ಟಿಗೆಗೆ ಹಾಕಿದರೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಈ ಪತ್ರಗಳನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಾಬಪ್ಪ ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಪಿ.ಜೆ. ಬಡಾವಣೆಯಲ್ಲಿರುವ ಮಹಿಳಾ ಪೊಲೀಸ್ ಠಾಣೆ ಆವರಣದಲ್ಲಿ ಏರ್ಪಡಿಸಿದ್ದ ಕಾನೂನು ಸೇವಾ ಸಲಹೆ ಪೆಟ್ಟಿಗೆಗಳ ಸೇವಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಈ ಕಾರ್ಯಕ್ರವನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು.
ಪ್ರತಿಯೊಬ್ಬ ಪ್ರಜೆಯ ಕುಂದು ಕೊರತೆಗಳಿಗೆ ಸೂಕ್ತವಾದ ಪರಿಹಾರ ನೀಡುವ ಉದ್ದೇಶದಿಂದ ಈ ಸೇವೆಯನ್ನು ಪ್ರಾರಂಭಿಸಲಾಗಿದೆ. ಸಾರ್ವಜನಿಕ ಸ್ಥಳಗಳಾದ ಪೊಲೀಸ್ ಠಾಣೆ, ತಾಲೂಕು ಪಂಚಾಯತ್ ಹಾಗೂ ಮಹಿಳಾ ಸಂಘಗಳ ಆವರಣಗಳಲ್ಲಿ ಇರಿಸಲಾಗುವ ಈ ಸಲಹಾ ಪೆಟ್ಟಿಗೆಗಳಲ್ಲಿ ತಮ್ಮ ಸಮಸ್ಯೆಗಳನ್ನು ಲಿಖಿತ ರೂಪದಲ್ಲಿ ಬರೆದು ಹಾಕಿದಲ್ಲಿ, ಆ ಸಮಸ್ಯೆಗಳಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ನಿರ್ದೇಶನದಲ್ಲಿ ಪರಿಹಾರ ಒದಗಿಸಿಕೊಡಲಾಗುವುದು ಎಂದರು.
ಮಹಿಳಾ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಜೆ.ಲಕ್ಷ್ಮಣ್ ಮಾತನಾಡಿ, ಸಾರ್ವಜನಿಕರ ಸಮಸ್ಯೆಗಳಿಗೆ ಅವರವರ ಮನೆ ಬಾಗಿಲಲ್ಲೇ ನ್ಯಾಯ ಒದಗಿಸಬೇಕೆನ್ನುವ ಉದ್ದೇಶದಿಂದ ಪ್ರಾರಂಭಿಸಿರುವ ಈ ಕಾನೂನು ಸೇವಾ ಸಲಹಾ ಪೆಟ್ಟಿಗೆ ಕಾರ್ಯಕ್ರಮವು ಉತ್ತಮವಾಗಿದೆ. ಹಲವು ಬಾರಿ ಸಾರ್ವಜನಿಕರು ತಮ್ಮ ದೂರುಗಳನ್ನು ಪೊಲೀಸ್ ಠಾಣೆಗೆ ಬಂದು ಹೇಳಿಕೊಳ್ಳಲು ಹಿಂಜರಿಯುತ್ತಾರೆ. ಅಂತಹ ಸಂದರ್ಭದಲ್ಲಿ ಕಾನೂನು ಸೇವಾ ಸಲಹಾ ಪೆಟ್ಟಿಗೆಯನ್ನು ಉಪಯೋಗಿಸಿಕೊಳ್ಳಬಹುದು ಎಂದರು.