ದಾವಣಗೆರೆ : ಕಳೆದ ಮೂರು ತಿಂಗಳ ವೇತನ ಬಿಡುಗಡೆ ಸೇರಿ ವಿವಿಧ ಬೇಡಿಕೆ ಈಡೇರಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ಎಚ್ಚರಿಕೆ ನೀಡಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಫೆಡರೇಷನ್ ರಾಜ್ಯಾಧ್ಯಕ್ಷ ಹೆಚ್ ಕೆ ರಾಮಚಂದ್ರಪ್ಪ, ಜೀವದ ಹಂಗು ತೊರೆದು ಕೊರೊನಾ ಕರ್ತವ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳ ವೇತನ ನೀಡಿಲ್ಲ. ಅವರು ಜೀವನ ಸಾಗಿಸುವುದು ಕಷ್ಟವಾದರೂ ಕೆಲಸ ಮಾಡುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಕೂಡಲೇ ಸ್ಪಂದಿಸಿ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ 35 ಸಾವಿರಕ್ಕೂ ಅಧಿಕ ಅಂಗನವಾಡಿ ಕಾರ್ಯಕರ್ತೆಯರಿದ್ದು, ಹಗಲಿರುಳು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಅವರಿಗೆ ಕೈಗವಸು, ಮಾಸ್ಕ್, ಸ್ಯಾನಿಟೈಸರ್ ವಿತರಣೆ ಮಾಡಿಲ್ಲ. ಭಯದಲ್ಲಿಯೇ ಕೆಲಸ ಮುಗಿಸಿ ಮನೆಗೆ ಹೋಗುವ ದುಸ್ಥಿತಿಯಲ್ಲಿರುವ ಕಾರ್ಯಕರ್ತೆಯರ ನೆರವಿಗೆ ಅಧಿಕಾರಿಗಳು ಬರಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಘೋಷಿಸಿರುವ ವಿಶೇಷ ಭತ್ಯೆ ಕೂಡ ಸಿಕ್ಕಿಲ್ಲ. ಕಾರ್ಮಿಕರ ವಿಮಾ, ಇಎಸ್ಐ ಯೋಜನೆ ಜಾರಿಗೊಳಿಸಲು ಕೂಡಲೇ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.