ದಾವಣಗೆರೆ: ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ಬಳಸಲಾಗುತ್ತಿರುವ ಸಾಮಗ್ರಿಗಳ ಮೇಲೆ ಕೆಲ ಖಾಸಗಿ ವ್ಯಕ್ತಿಗಳು ಜಾಹೀರಾತು ಫಲಕ ಸೇರಿದಂತೆ ಇನ್ನಿತರೆ ಭಿತ್ತಿಪತ್ರ ಅಂಟಿಸುವ ಮೂಲಕ ವಿರೂಪಗೊಳಿಸುತ್ತಿದ್ದಾರೆ. ಈ ರೀತಿ ಸಾರ್ವಜನಿಕ ಆಸ್ತಿಯನ್ನು ವಿರೂಪಗೊಳಿಸಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಸೂಕ್ತ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ರವಾನಿಸಿದ್ದಾರೆ.
ಇಂದು ಜಿಲ್ಲಾಡಳಿತ ಭವನದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರ ಅವಹಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಅಭಿವೃದ್ಧಿಗಾಗಿ ನಗರದಲ್ಲಿ ಸ್ಥಳೀಯ ಬಸ್ ನಿಲ್ದಾಣ, ರಸ್ತೆ ಕಾಮಗಾರಿಗಳು ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಖಾಸಗಿ ಬಸ್ ನಿಲ್ದಾಣದ ಕಾಮಗಾರಿ ಅನುಕೂಲಕ್ಕಾಗಿ ಹಾಕಿರುವ ತಗಡಿನ ಶೀಟ್‍ಗಳು ಜಾಹೀರಾತು ಫಲಕಗಳಿಂದ ತುಂಬಿಹೋಗಿವೆ.
ಹೀಗೆ ಅನಧಿಕೃತವಾಗಿ ಅನುಮತಿಯಿಲ್ಲದೇ ಜಾಹೀರಾತು ಮತ್ತು ಪ್ರಚಾರ ಪಡೆದುಕೊಳ್ಳುತ್ತಿರುವುದು ಕಾನೂನು ಬಾಹಿರ ಕೆಲಸ. ಇಂತಹ ಜಾಹೀರಾತುಗಳನ್ನು ತೆರವುಗೊಳಿಸಿ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಂಡು ದಂಡ ವಿಧಿಸಲಾಗುವುದು ಎಂದರು.
ಇದೇ ವೇಳೆ ಸಾಮಾಜಿಕ ಕಾರ್ಯಕರ್ತ ಶ್ರೇಯಸ್, ಸ್ಮಾರ್ಟ್ ಸಿಟಿ ಅನುದಾನದಲ್ಲಿ ಕಟ್ಟಿರುವ ಇ-ಶೌಚಾಲಯಗಳಲ್ಲಿ ನೀರಿನ ವ್ಯವಸ್ಥೆ ಇಲ್ಲದಿರುವುದರಿಂದ ಅವುಗಳ ಬಳಕೆಯಾಗುತ್ತಿಲ್ಲ. ಸ್ಮಾರ್ಟ್‍ಸಿಟಿ ಕಾಮಗಾರಿಯಲ್ಲಿ ಉತ್ತಮ ಗುಣಮಟ್ಟದ ಸಾಮಗ್ರಿಗಳನ್ನು ಬಳಸುತ್ತಿಲ್ಲ ಎಂದು ದೂರು ನೀಡಿದರು.