ದಾವಣಗೆರೆ: ತುಂಗಭದ್ರಾ ನದಿಗೆ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲಾಗಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹಿರೇಗೋಣಿಗೆರೆ ಗ್ರಾಮದಲ್ಲಿ ಭಾನುವಾರ ನಡೆದಿದೆ. ಸಹೋದರರಾದ ಕಿರಣ್, ವರುಣ್ ಹಾಗೂ ಗ್ರಾಮದ ಪವನ್ ನೀರುಪಾಲಾದ ಯುವಕರು. ಈ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಪೊಲೀಸರು ಯುವಕರ ಮೃತದೇಹಗಳಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.
ಸದ್ಯ ನೀರುಪಾಲಾದ ಮೂವರಲ್ಲಿ ವರುಣ್ ಮೃತದೇಹ ಮಾತ್ರ ಪತ್ತೆಯಾಗಿದೆ. ಇನ್ನೂ ಇಬ್ಬರು ಯುವಕರ ಮೃತದೇಹಗಳ ಪತ್ತೆಗೆ ಶೋಧಕಾರ್ಯ ಮುಂದುವರೆದಿದೆ. ಎದೆ ಎತ್ತರಕ್ಕೆ ಬೆಳೆದು ನಿಂತಿದ್ದ ಮಕ್ಕಳನ್ನು ಕಳೆದುಕೊಂಡ ಪೋಷಕರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಶಾಸಕ ಎಂ.ಪಿ. ರೇಣುಕಾಚಾರ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಸದ್ಯ ಬಿಸಿಲಿನ ತಾಪಮಾನ ಹೆಚ್ಚಾಗಿದ್ದರಿಂದ ಯುವಕರು ತುಂಗಭದ್ರಾ ನದಿಗೆ ಈಜಲು ತೆರಳಿದ್ದರು. ಆಳವಾದ ಗುಂಡಿಗಳಿರುವುದನ್ನು ತಿಳಿಯದ ಯುವಕರು ನೀರಿಗಿಳಿದು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ನದಿ ದಡದಲ್ಲಿದ್ದ ಯುವಕರ ಬಟ್ಟೆ ಗಮನಿಸಿದ ಸ್ಥಳೀಯರು ಯುವಕರ ಗುರುತನ್ನು ಪತ್ತೆ ಮಾಡಿದ್ದಾರೆ.
ಇದನ್ನೂ ಓದಿ: ಬೇರೊಬ್ಬನ ಜೊತೆ ರೀಲ್ಸ್ ಮಾಡಿದಳೆಂದು ಪ್ರಿಯತಮೆಯನ್ನೇ ಕೊಂದ ಪ್ರೇಮಿ: ಆರೋಪಿ ಬಂಧನ