ದಾವಣಗೆರೆ: ಉತ್ತರಪ್ರದೇಶದ ಹಥ್ರಾಸ್ನಲ್ಲಿ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಆರೋಪ ಹಾಗು ಸಾವು ಪ್ರಕರಣ ಖಂಡಿಸಿ ನಗರದ ಜಯದೇವ ವೃತ್ತದ ಬಳಿ ವಾಲ್ಮೀಕಿ ನಾಯಕ ಸಮಾಜದ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು.
ವಾಲ್ಮೀಕಿ ಸಮಾಜದ ಹಾಸ್ಟೆಲ್ ಎದುರು ಜಮಾವಣೆಗೊಂಡ ನೂರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಮೂಲಕ ಎಸಿ ಕಚೇರಿಗೆ ತೆರಳಿ ಉಪವಿಭಾಗಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.
ದಲಿತ ಸಮಾಜದ ಯುವತಿ ಮೇಲೆ ಅತ್ಯಾಚಾರವೆಸಗಿ ಆಕೆಯ ಸಾವಿಗೆ ಕಾರಣವಾಗಿರುವ ಮಾಡಿರುವ ಆರೋಪಿಗಳನ್ನು ಗಲ್ಲಿಗೇರಿಸಬೇಕು. ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿದೆ. ಯಾವುದೇ ಕಾರಣಕ್ಕೂ ಈ ಪ್ರಕರಣದಲ್ಲಿ ಯಾವುದೇ ಆರೋಪಿಯೂ ತಪ್ಪಿಸಿಕೊಳ್ಳಬಾರದು. ಈ ಪ್ರಕರಣದಲ್ಲಿ ಎಷ್ಟೇ ಬಲಾಢ್ಯರಿದ್ದರೂ ಬಿಡಬಾರದು. ಉತ್ತರ ಪ್ರದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳೆಯರ ರಕ್ಷಣೆಗೆ ಕಾನೂನು ಮತ್ತಷ್ಟು ಬಿಗಿಗೊಳಿಸಬೇಕು ಎಂದು ಒತ್ತಾಯಿಸಿದರು.
ಗ್ಯಾಂಗ್ ರೇಪ್ ನಡೆದು 14 ದಿನಗಳಾದರೂ ಸುಮ್ಮನಿದ್ದ ಯೋಗಿ ಆದಿತ್ಯನಾಥ್ ಹೆಣ್ಣುಮಕ್ಕಳಿಗೆ ಹಾಗೂ ಹತ್ಯೆಗೀಡಾದ ಯುವತಿಯ ಕುಟುಂಬಸ್ಥರಿಗೆ ಸೂಕ್ತ ಭದ್ರತೆ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಹೀಗಾಗಿ ಯೋಗಿ ಸರ್ಕಾರವನ್ನು ವಜಾಗೊಳಿಸಬೇಕು. ಈ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಜಿಲ್ಲಾಧಿಕಾರಿ, ವೈದ್ಯಾಧಿಕಾರಿ, ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಮೃತಳ ಕುಟುಂಬಕ್ಕೆ ಆರ್ಥಿಕ ನೆರವು ಹಾಗೂ ಕುಟುಂಬ ವರ್ಗದವರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.