ಧಾರವಾಡ: ಕೊರೊನಾ ಪ್ರೇರಿತ ಲಾಕ್ಡೌನ್ನಲ್ಲಿ ತೊಂದರೆ ಅನುಭವಿಸಿದ ಸಂಕಷ್ಟಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಆಟೋ ರಿಕ್ಷಾ ಚಾಲಕರ ಅಭಿವೃದ್ಧಿ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪರಿಹಾರ ಬಿಡುಗಡೆ ಮಾಡದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಆಟೋ ಚಾಲಕರು, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಸರ್ಕಾರ ₹ 5 ಸಾವಿರ ಪರಿಹಾರ ಘೋಷಿಸಿದೆ. ಜಿಲ್ಲೆಯಲ್ಲಿ 13 ಸಾವಿರ ಆಟೋ ಚಾಲಕರಿದ್ದು, ಕೇವಲ 2 ಸಾವಿರ ಮಂದಿಗೆ ಮಾತ್ರ ಪರಿಹಾರ ಸಿಕ್ಕಿದೆ. ಇದರಿಂದ ರಿಕ್ಷಾ ಚಾಲಕರ ಕುಟುಂಬಗಳು ಬೀದಿಗೆ ಬೀಳುವ ಹಂತಕ್ಕೆ ಬಂದಿವೆ. ಕೂಡಲೇ ಉಳಿದವರಿಗೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.