ಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಅಖಿಲ ಭಾರತ ಶಿಕ್ಷಕರ ಫೆಡರೇಶನ್ ಅಧ್ಯಕ್ಷ ಬಸವರಾಜ ಗುರಿಕಾರ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಉತ್ತರ ಕನ್ನಡ, ಗದಗ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಪದವೀಧರರು ಈ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ನಾಲ್ಕು ಜಿಲ್ಲೆಗಳಲ್ಲಿ ಸುಮಾರು 75 ಸಾವಿರ ಪದವೀಧರರಿದ್ದಾರೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ನಾನು ಪ್ರವಾಸ ಮಾಡಿದ್ದು, ಪದವೀಧರರಿಂದ ಉತ್ತಮ ಸ್ಪಂದನೆ ದೊರೆತಿದೆ ಎಂದು ಅವರು ಹೇಳಿದರು.
ಸದ್ಯ ನಾಮಪತ್ರ ಸಲ್ಲಿಕೆ ಮಾಡಿರುವ ಗುರಿಕಾರ, ಈಗಾಗಲೇ ಹಲವು ಜಿಲ್ಲೆಗಳಲ್ಲಿ ಪ್ರಚಾರ ಕಾರ್ಯ ಮಾಡಿರುವುದಾಗಿ ತಿಳಿಸಿದ್ದಾರೆ. ಸಾಕಷ್ಟು ಜನರ ಬೆಂಬಲ ಸಿಗುತ್ತಿದ್ದು, ಪ್ರಸಕ್ತ ವರ್ಷದ ಚುನಾವಣೆಯಲ್ಲಿ ಗೆಲುವು ಸಾಧಿಸುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.