ಹುಬ್ಬಳ್ಳಿ : ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ವೇಳೆ ವೀರ ಸಾವರ್ಕರ್ ಫೋಟೋ ಸುಟ್ಟಿರುವುದನ್ನು ಖಂಡಿಸಿ ಇಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಣ ಎಂ ಬಿ ಪಾಟೀಲ್ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಧಾರವಾಡ ಜಿಲ್ಲಾಧ್ಯಕ್ಷ ಸಂಜೀವ್ ಕಪಾಟಕರ್ ಸೇರಿದಂತೆ 50 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಿಜೆಪಿ ಕಾರ್ಯಕರ್ತರಿಂದ ಕೊಡಗಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಖಂಡಿಸಿ ಶುಕ್ರವಾರ ಮಧ್ಯಾಹ್ನ ಧಾರವಾಡದಲ್ಲಿ ಪ್ರತಿಭಟಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ವೀರ ಸಾವರ್ಕರ್ ಪ್ರತಿಕೃತಿ ದಹಿಸಿದ್ದರು. ಇದರಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಎಂ ಬಿ ಪಾಟೀಲ್ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಬಳಿಕ ಪರಿಸ್ಥಿತಿ ಕೈ ಮೀರುವುದನ್ನು ಅರಿತ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನ ವಶಕ್ಕೆ ಪಡೆದರು.
ಇದೇ ವೇಳೆ ಮಾತನಾಡಿದ ಪೊಲೀಸ್ ಆಯುಕ್ತ ಲಾಬೂರಾಮ್, ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ. ಸಾವರ್ಕರ್ ಫೋಟೋ ಸುಟ್ಟ ಬಗ್ಗೆ ಧಾರವಾಡ ಸಬರ್ ಬನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸುವಂತೆ ಹಿಂದೂಪರ ಸಂಘಟನೆ ಪಟ್ಟು
ಬಳಿಕ ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಎಂ ಬಿ ಪಾಟೀಲ್, ಹುಬ್ಬಳ್ಳಿ ರಂಭಾಪುರಿ ಶ್ರೀ ಹಾಗೂ ಸಿದ್ದರಾಮಯ್ಯ ನಡುವೆ ಯಾವ ಸಂಭಾಷಣೆ ನಡೆದಿದೆ ಎಂದು ಅವರನ್ನೇ ಕೇಳಬೇಕು ಎಂದ ಅವರು, ನಾವು ಯಾವುದೇ ಧರ್ಮ ಒಡೆದಿಲ್ಲ. ರಾಜ್ಯದಲ್ಲಿ ಲಿಂಗಾಯತ ಸಮಾಜದ 99 ಉಪ ಪಂಗಡಗಳಿಗೆ ಸೌಲಭ್ಯ ಸಿಗುತ್ತಿಲ್ಲ. ಲಿಂಗಾಯತ ಉಪ ಪಂಗಡಗಳಿಗೆ ಶೈಕ್ಷಣಿಕ ಸೌಲಭ್ಯ ಸಿಗಬೇಕು ಅನ್ನೋ ಉದ್ದೇಶದಿಂದ ಆ ಪ್ರಯತ್ನ ಮಾಡಲಾಗಿತ್ತು. ಚುನಾವಣೆ ನಂತರ ಎಲ್ಲ ಸ್ವಾಮೀಜಿಗಳ ನೇತೃತ್ವದಲ್ಲಿ ಈ ಬಗ್ಗೆ ಚರ್ಚೆ ಮಾಡಲಾಗುವುದು. ಈಗ ರಾಜ್ಯದಲ್ಲಿ ಉಪ ಪಂಗಡಗಳು ಬೇರೆ ಬೇರೆಯಾಗುತ್ತಿವೆ. ಹೀಗಾಗಿ, ನಾವು ಒಗ್ಗೂಡಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಸರಿಯಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ