ಹುಬ್ಬಳ್ಳಿ: ಲಾಕ್ಡೌನ್ ಹಿನ್ನೆಲೆ ರೈತರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದ್ದು, ಕೂಡಲೇ ರಾಜ್ಯ ಸರ್ಕಾರ ಸ್ಪಂದಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಒತ್ತಾಯಿಸಿದ್ದಾರೆ.
ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಪಿಎಂಸಿಗಳಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ. ದಲ್ಲಾಳಿಗಳು ಕಡಿಮೆ ದರದಲ್ಲಿ ತರಕಾರಿ ತಂದು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದಾರೆ. ರಾಜ್ಯಾದ್ಯಂತ ರೈತರು ಸಾಕಷ್ಟು ಸಮಸ್ಯೆ ಎದುರಿಸುವಂತಾಗಿದೆ ಎಂದರು.
ರೈತರು ತಾವು ಬೆಳೆದ ಬೆಳೆ ರಸ್ತೆಗೆ ಚೆಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಕೃಷಿ ಸಚಿವರಿಗೂ ಮನವಿ ಮಾಡಲಾಗಿದೆ. ಮುಖ್ಯಮಂತ್ರಿ ಅವರು ಕೂಡಲೇ ಸೂಕ್ತ ಕ್ರಮ ಜರುಗಿಸುವ ಮೂಲಕ ರೈತರ ಹಿತಾಸಕ್ತಿ ಕಾಪಾಡಬೇಕು ಎಂದು ಹೊರಟ್ಟಿ ಹೇಳಿದ್ದಾರೆ.