ಧಾರವಾಡ: ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕೊರೊನಾ ಚಿಕಿತ್ಸಾ ಪರಿಕರಗಳ ಖರೀದಿಯಲ್ಲಿ ಭ್ರಷ್ಟಾಚಾರ ಹಾಗೂ ನೆರೆ ಪರಿಸ್ಥಿತಿ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದರು.
ಕೊರೊನಾ ಹೆಸರಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರ ನಡೆಸಿದೆ. ನಿರಂತರ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ವಹಣೆಯನ್ನು ಸರ್ಕಾರ ಮಾಡುತ್ತಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.