ಧಾರವಾಡ: ಕೊರೊನಾ ವೈರಸ್ ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಇಂದು ನವಲಗುಂದ ತಾಲೂಕಿನ ಜಾವೂರ, ಬೆಳಹಾರ ಮತ್ತಿತರ ಗ್ರಾಮಗಳಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಬ್ಲೀಚಿಂಗ್ ಪೌಡರ್ ಸಿಂಪಡಣೆ ಮಾಡಲಾಯಿತು.

ಊರಿನ ಪ್ರಮುಖ ಚರಂಡಿಗಳನ್ನು ಸ್ವಚ್ಛ ಮಾಡಿ, ಪೌಡರ್ ಸಿಂಪಡಣೆ ಮಾಡಿದರು. ಊರಿನ ಪ್ರತಿಯೊಂದು ಮೂಲೆಯಲ್ಲಿಯೂ ಸಹ ಬ್ಲೀಚಿಂಗ್ ಪೌಡರ್ ಸಿಂಪಡಣೆ ಮಾಡಲಾಯಿತು. ದೇವಸ್ಥಾನಗಳು, ಪ್ರಮುಖ ಕಟ್ಟೆ, ಬಸ್ ನಿಲ್ದಾಣಗಳಲ್ಲಿ ಜನರು ಗುಂಪು ಗುಂಪಾಗಿ ಕೂಡದ ಹಾಗೆ ಕ್ರಮ ಕೈಗೊಂಡಿದ್ದಾರೆ.

ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮನೆ ಮನೆಗೆ ತೆರಳಿ ಕೊರೊನಾ ಸೋಂಕು ಹರಡದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತಿದ್ದಾರೆ.

ಕೊರೊನಾ ಸೋಂಕು ತಡೆಯಲು ಸಾರ್ವಜನಿಕರು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳು, ರೋಗದ ಲಕ್ಷಣಗಳು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ. ಬೇರೆ ರಾಜ್ಯಗಳಿಂದ ಬಂದ ವಲಸಿಗರ ಮನೆಗಳಿಗೆ ಭೇಟಿ ನೀಡಿ ಹೊರಗೆ ಬರದ ಹಾಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿತ್ತಿದ್ದಾರೆ.
