ಧಾರವಾಡ : ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ ಮತ್ತು ರಾಷ್ಟ್ರ ವಿರೋಧಿ ನೀತಿಗಳ ವಿರುದ್ಧ ಭಾರತ ಕಮ್ಯೂನಿಸ್ಟ್ ಪಕ್ಷದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರೈತರು ಕಾರ್ಮಿಕರು ಮತ್ತು ಜನಸಾಮಾನ್ಯರ ಬಗ್ಗೆ ಕೇಂದ್ರ ಸರ್ಕಾರ ತಳೆದಿರುವ ನಿರ್ಲಕ್ಷ್ಯ ಧೋರಣೆ ವಿರುದ್ಧ ಭಾರತ ಕಮ್ಯೂನಿಸ್ಟ್ ಪಕ್ಷ ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿದೆ. ಆ ಹಿನ್ನೆಲೆ ಧಾರವಾಡದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪಕ್ಷದ ಕಾರ್ಯಕರ್ತರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸಾಕಷ್ಟು ಅನುದಾನ ಮತ್ತು ಹಣಕಾಸು ನೆರವು ಒದಗಿಸಬೇಕು. ವಲಸೆ ಕಾರ್ಮಿಕರಿಗೆ ಆಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಇರುವಂತಹ ರೈಲ್ವೆ ಮತ್ತು ಬಸ್ ವ್ಯವಸ್ಥೆ ಮಾಡಬೇಕು. ಕಾರ್ಮಿಕ ಕಾನೂನುಗಳನ್ನು ದುರ್ಬಲಗೊಳಿಸಬಾರದು ಎಂಬ ವಿಷಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.