ಧಾರವಾಡ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ವಾತಂತ್ರ್ಯೋತ್ಸವದ ಸಂದೇಶದಲ್ಲಿ ದೇಶದಾದ್ಯಂತ ಮರುಬಳಕೆಗೆ ಬಾರದ ಪ್ಲಾಸ್ಟಿಕ್‌ಅನ್ನು ಸಂಪೂರ್ಣವಾಗಿ ನಿಷೇಧಿಸಲು ಕರೆ ನೀಡಿರುವ ಹಿನ್ನೆಲೆಯಲ್ಲಿ ಬರುವ ಅ. 1ರಿಂದ ಜಿಲ್ಲೆಯಾದ್ಯಂತ ಪ್ಲಾಸ್ಟಿಕ್ ನಿಷೇಧ ಜಾರಿಗೊಳಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಪಣ ತೊಡಬೇಕೆಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅ. 1ರಿಂದ ಕಡ್ಡಾಯವಾಗಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಕೈ ಬಿಡಬೇಕು. ಕುಡಿಯುವ ನೀರಿನ ಬಾಟಲ್‌ಗಳನ್ನು ಬಳಸದೆ ಸ್ಟೀಲ್ ಲೋಟಗಳು ಅಥವಾ ಕಾಗದದ ಲೋಟಗಳನ್ನು ಬಳಸಬೇಕು. ಹೂ ಗುಚ್ಚಗಳಿಗೆ ಪ್ಲಾಸ್ಟಿಕ್ ಹೊದಿಕೆ ಹಾಕಬಾರದು. ಕಚೇರಿಯ ಆವರಣಗಳನ್ನು ಸ್ವಚ್ಛವಾಗಿಟ್ಟುಕೊಂಡು ಸುಣ್ಣ ಬಣ್ಣ ಬಳಿಸಬೇಕು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಅಧಿಕಾರಿಗಳು ಅವಳಿ ನಗರದ ಹೋಟೆಲ್, ಕಲ್ಯಾಣ ಮಂಟಪಗಳ ಸಮೀಕ್ಷೆ ಮಾಡಿ ಅರಿವು ಮೂಡಿಸಬೇಕು. ಹಸಿ ಕಸ, ಒಣ ಕಸ ವಿಂಗಡಣೆ ಮಾಡಿ ತ್ಯಾಜ್ಯ ಸಂಗ್ರಹಿಸಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿಯೂ ಇದು ಜಾರಿಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಪ್ಲಾಸ್ಟಿಕ್ ನಿಷೇಧ ಕುರಿತು ಪ್ರತಿಜ್ಞಾವಿಧಿ ಸ್ವೀಕಾರ, ಪ್ರಬಂಧ, ಚರ್ಚಾ ಸ್ಪರ್ಧೆ, ಚಿತ್ರಕಲೆ, ನಾಟಕ, ರಸಪ್ರಶ್ನೆ ಸ್ಪರ್ಧೆಗಳನ್ನು ಏರ್ಪಡಿಸಿ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳ ಗುಂಪುಗಳನ್ನು ರಚಿಸಿ ಸಾರ್ವಜನಿಕರ ಮನೆ ಮನೆಗೆ ತೆರಳಿ ಅರಿವು ಮೂಡಿಸಬೇಕು. ಸರ್ಕಾರೇತರ ಸಂಘ ಸಂಸ್ಥೆಗಳು ಹಾಗೂ ಆಶಾ ಕಾರ್ಯಕರ್ತೆಯರ ಸಹಕಾರದೊಂದಿಗೆ ತ್ಯಾಜ್ಯ ಸಂಗ್ರಹಿಸುತ್ತಾ ಜಾಥಾಗಳನ್ನು ಆಯೋಜಿಸಬೇಕು. ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಮಾಡಲು ವಾಹನಗಳ ವ್ಯವಸ್ಥೆ ಮಾಡಬೇಕು ಎಂದರು.
ಉದ್ಯಾನವನ, ಕೆರೆ ಇತರೆ ಜಲಮೂಲಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ ವಿಲೇವಾರಿ ಮಾಡಬೇಕು. ಧಾರ್ಮಿಕ ಗುರುಗಳು ಹಾಗೂ ಗಣ್ಯ ವ್ಯಕ್ತಿಗಳಿಂದ ಸಾರ್ವಜನಿಕರಿಗೆ ಸಂದೇಶ ರವಾನಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ಎಲ್ಲಾ ಸಿಬ್ಬಂದಿಯಿಂದ ಒಂದು ಬಾರಿ ಬಳಕೆಯಾಗುವ ಪ್ಲಾಸ್ಟಿಕ್‌ಅನ್ನು ಕಡ್ಡಾಯವಾಗಿ ನಿಷೇಧಿಸಿರುವ ಕುರಿತು ಘೋಷಣಾ ಪತ್ರ ಪಡೆಯಬೇಕು. ಅ. 1ರಿಂದ ನಿರಂತರವಾಗಿ ಎಲ್ಲಾ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಜಿಲ್ಲಾಮಟ್ಟದಲ್ಲಿ ವೈವಿಧ್ಯಮಯ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಜನಸಾಮಾನ್ಯರಲ್ಲಿ ಪ್ಲಾಸ್ಟಿಕ್ ಬಳಕೆ ಕೈಬಿಡಲು ಮನವರಿಕೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.