ಧಾರವಾಡ: ಲೋಕೋಪಯೋಗಿ ಇಲಾಖೆಯ ಎಲ್ಲಾ ಯೋಜನೆಗಳ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ಅನುದಾನವನ್ನು ಬಳಕೆ ಮಾಡಿಕೊಂಡು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕೆಂದು ಡಿಸಿಎಂ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದರು.
ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗುಣಮಟ್ಟದಲ್ಲಿ ರಾಜಿಯಾಗದೆ ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಯಾವುದೇ ಕಾಮಗಾರಿಯಲ್ಲಿ ಕಳಪೆಯಾಗದಂತೆ ಜಾಗೃತಿವಹಿಸಬೇಕು. ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಗಳ ಅನುದಾನ ಬಳಕೆಯಲ್ಲಿ ಲ್ಯಾಪ್ಸ್ ಆಗದಂತೆ ಎಚ್ಚರಿಕೆವಹಿಸಬೇಕು. ಈ ಅನುದಾನವನ್ನು ಬಳಕೆ ಮಾಡದಿದ್ದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.
ಇದೇ ವೇಳೆ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ವಿದ್ಯಾರ್ಥಿ ನಿಲಯಗಳಿಗೆ ಉತ್ತಮ ಗುಣಮಟ್ಟದ ಆಹಾರ ಪೂರೈಸಬೇಕು. ವಿದ್ಯಾರ್ಥಿನಿಲಯಗಳಲ್ಲಿ ಸ್ಪಚ್ಛತೆ ಕಾಪಾಡಬೇಕು. ಉತ್ತಮ ಫಲಿತಾಂಶ ಬರುವಂತೆ ವಿದ್ಯಾರ್ಥಿಗಳಿಗೆ ಪೂರ್ವ ತರಬೇತಿ ನೀಡಬೇಕು. ವಿದ್ಯಾರ್ಥಿಗಳ ಅಧ್ಯಯನಕ್ಕೆ ಯಾವುದೇ ಕೊರತೆಗಳಾಗದಂತೆ ಜಾಗೃತಿವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ರಾಜೇಶ್, ಅಧೀಕ್ಷಕ ಅಭಿಯಂತರ ಶಿವಾನಂದ ನಾಯಕ, ಕಾರ್ಯಪಾಲಕ ಅಭಿಯಂತರ ವಿ ಬಿ ಯಮಕನಮರಡಿ ಹಾಗೂ ಜಿಲ್ಲೆಯ ಎಲ್ಲಾ ಕಾರ್ಯಪಾಲಕ, ಸಹಾಯಕ ಕಾರ್ಯಪಾಲಕ ಅಭಿಯಂತರರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಭಿಯಂತರರು ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.