ಧಾರವಾಡ: ಲಾಕ್ಡೌನ್ ಅವಧಿಯಲ್ಲಿ ರೈತರು ಬೆಳೆ ಮಾರಲು ಮಾರುಕಟ್ಟೆ ಇಲ್ಲದೆ ಸಾಕಷ್ಟು ಪ್ರಮಾಣದ ಬೆಳೆ ಹಾಳಾಗಿವೆ. ರೈತರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಲಾಯಿತು.
ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ರೈತರು, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಅವರಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಮನವಿ ಸಲ್ಲಿಸಿದರು.
ಕೊರೊನಾ ಹರಡದಂತೆ ಸರ್ಕಾರ ಕೈಗೊಂಡ ಕ್ರಮಗಳಿಗೆ ರೈತರು ಸಹಕಾರ ನೀಡುತ್ತಿದ್ದಾರೆ. ಆದರೆ ಲಾಕ್ಡೌನ್ನಿಂದಾಗಿ ರೈತರು ಬೆಳೆದ ಸಾಕಷ್ಟು ಬೆಳೆ ಮಾರಾಟಕ್ಕೆ ಸೂಕ್ತ ಮಾರುಕಟ್ಟೆ ಇಲ್ಲದೆ ಹಾಳಾಗಿವೆ. ಹಾಗಾಗಿ ಸೂಕ್ತ ಮಾರುಕಟ್ಟೆ ಒದಗಿಸಬೇಕು ಎಂದು ಆಗ್ರಹಿಸಿದರು.
ರೈತರ ನೆರವಿಗಾಗಿ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಆದಷ್ಟು ಬೇಗ ರೈತರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಬೇಕು ಎಂದು ಒತ್ತಾಯಿಸಿದರು.