ಧಾರವಾಡ : ಜಿಲ್ಲಾ ಪಂಚಾಯತ್ನ ಪ್ರತಿಯೊಂದು ಕ್ಷೇತ್ರಗಳಲ್ಲಿ ಇಲ್ಲಿಯವರೆಗೆ ಕೈಗೊಂಡಿರುವ ಕಾಮಗಾರಿ, ಯೋಜನೆಗಳ ಅನುಷ್ಠಾನದ ಕುರಿತು ವರದಿ ನೀಡಬೇಕು ಮತ್ತು ಫೆಬ್ರವರಿ ಅಂತ್ಯದೊಳಗೆ ಕ್ರಿಯಾ ಯೋಜನೆ ಅನುಮೋದಿಸಿದ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ವಿಜಯಲಕ್ಷ್ಮಿ ಪಾಟೀಲ ಸೂಚಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಇಲಾಖೆಯ ಕಾಮಗಾರಿ, ಯೋಜನೆಗಳನ್ನು ಅನುಷ್ಠಾನಗೊಳಿಸುವಾಗ ಅಲ್ಲಿನ ಜನ ಪ್ರತಿನಿಧಿಗಳಿಗೆ ಮಾಹಿತಿ ನೀಡಬೇಕು. ಸರ್ಕಾರ ಹಾಗೂ ಜಿಲ್ಲಾ ಪಂಚಾಯತ್ನಿಂದ ಬಿಡುಗಡೆಯಾಗುವ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿ, ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಓದಿ : ಅಂಗನವಾಡಿ ಕೇಂದ್ರಗಳ ಬಗ್ಗೆ ಸರ್ಕಾರದ ನಿರ್ಲಕ್ಷ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಶಿವಾನಂದ ಕರಿಗಾರ ಮಾತನಾಡಿ, ಕ್ರಿಯಾಯೋಜನೆಯಲ್ಲಿ ಅನುಮೋದಿಸಿದ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಬೇಕು. ಹಂಚಿಕೆಯಾದ ಅನುದಾನ ಬಳಕೆ ಮಾಡಿಕೊಂಡು ಗುರಿ ಸಾಧಿಸಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ ಮಾತನಾಡಿ, ಜಿಲ್ಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಕಳೆದ ಎರಡು - ಮೂರು ತಿಂಗಳಲ್ಲಿ ಸುಮಾರು 6 ಲಕ್ಷ ಮಾನವ ದಿನಗಳನ್ನು ಸೃಷ್ಟಿಸಿ ಉದ್ಯೋಗ ನೀಡಲಾಗಿದೆ. ಪ್ರತಿ ತಾಲೂಕಿನ ಇಒ, ಬಿಇಒ ಹಾಗೂ ಇತರ ಅಧಿಕಾರಿಗಳಿಗೆ ಅವರ ತಾಲೂಕಿನ ಯೋಜನೆ, ಕಾಮಗಾರಿಗಳ ಪ್ರಗತಿ ಕುರಿತು ವರದಿ ಸಲ್ಲಿಸಲು ಸೂಚಿಸಲಾಗಿದೆ. ಎಲ್ಲ ಹಂತದ ಜನ ಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ನಿಯಮಾನುಸಾರ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗುತ್ತಿದೆ. ಸರ್ಕಾರದ ಸೌಲಭ್ಯಗಳು ಪ್ರತಿಯೊಬ್ಬರಿಗೂ ತಲುಪುವಂತೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತ್ ಅಧ್ಯಕ್ಷರು ಸಭೆಯಲ್ಲಿ ಪಾಲ್ಗೊಂಡು ವಿವಿಧ ವಿಷಯಗಳ ಕುರಿತು ಚರ್ಚಿಸಿದರು.