ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗದ ಬಿ.ಆರ್.ಟಿ.ಎಸ್ ಹುಬ್ಬಳ್ಳಿ ಘಟಕದಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ಸಂಸ್ಥೆಯ ಸಿಬ್ಬಂದಿಗೆ ಮಾಸ್ಕ್, ಸ್ಯಾನಿಟೈಸರ್, ಸೋಪ್ ವಿತರಣಾ ಕಾರ್ಯಕ್ರಮವನ್ನು ಇಂಡಿಯನ್ ರೆಡ್ ಕ್ರಾಸ್ ಸಹಯೋಗದಲ್ಲಿಂದು ಹಮ್ಮಿಕೊಳ್ಳಲಾಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ, ಕೊರೊನಾ ಸಂಕಷ್ಟದ ಸಮಯದಲ್ಲಿ ಸಾರಿಗೆ ಸಂಸ್ಥೆಯ ಸಿಬ್ಬಂದಿ ಕೊರೊನಾ ವಾರಿಯರ್ಸ್ ಆಗಿ ಕಾರ್ಯನಿರ್ವಹಿಸುತ್ತಿರುವುದನ್ನು ಅಭಿನಂದಿಸಿದರು.

ಪ್ರಯಾಣಿಕರೊಂದಿಗೆ ಪ್ರತಿನಿತ್ಯ ಕಾರ್ಯನಿರ್ವಹಿಸುವ ಸಿಬ್ಬಂದಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಿ ಸುರಕ್ಷತಾ ನಿಯಮಗಳನ್ನು ಪಾಲಿಸಿ ಸುರಕ್ಷತೆಯಿಂದ ಕಾರ್ಯನಿರ್ವಹಿಸುವಂತೆ ಮತ್ತು ಸಂಸ್ಥೆಯಲ್ಲಿ ಕೊರೊನಾ ವೈರಸ್ ಸೋಂಕಿಗೆ ಒಳಗಾಗಿ ಗುಣಮುಖರಾದವರು, ಇತರೆ ಕೊರೊನಾ ಪೀಡಿತ ಸಂಧಿಗ್ನ ಪರಿಸ್ಥಿತಿಯಲ್ಲಿರುವಂತಹ ರೋಗಿಗಳಿಗೆ ಪ್ಲಾಸ್ಮಾ ದಾನವನ್ನು ಮಾಡಿ ಜೀವವನ್ನು ಉಳಿಸಲು ಸಹಾಯ ಮಾಡಲು ತಿಳಿಸಿದರು.