ಹುಬ್ಬಳ್ಳಿ: ನಾನು ಯಾವುದೇ ಸ್ಥಾನದ ನಿರೀಕ್ಷೆ ಹೊಂದಿಲ್ಲ, ಪಕ್ಷ ಯಾವ ಜವಾಬ್ದಾರಿ ವಹಿಸುವುದೋ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಮಾಡುವ ವಿಚಾರ ಮುಖ್ಯಮಂತ್ರಿಗಳಿಗೆ ಬಿಟ್ಟದ್ದು. ಆ ಬಗ್ಗೆ ಚರ್ಚಿಸಲು ನಾಳೆ ಅಥವಾ ನಾಡಿದ್ದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ಹೈಕಮಾಂಡ್ ನಿರ್ದೇಶನದಂತೆ ಸಚಿವ ಸಂಪುಟ ವಿಸ್ತರಣೆ ಹಾಗೂ ಡಿಸಿಎಂ ಸ್ಥಾನ ನೇಮಕ ನಡೆಯಲಿದ್ದು, ಅದಕ್ಕೆ ಸಿಎಂ ಉತ್ತರ ಕೊಡಲಿದ್ದಾರೆ ಎಂದರು.
ಉತ್ತರ ಕರ್ನಾಟಕ ಭಾಗದವರಿಗೆ ಸಚಿವ ಸ್ಥಾನ ನೀಡುವ ವಿಚಾರ ಸಿಎಂ ವಿವೇಚನೆಗೆ ಬಿಟ್ಟಿದ್ದಾಗಿದೆ. ಅಷ್ಟಕ್ಕೂ ಬಿಜೆಪಿ ಸರ್ಕಾರದಲ್ಲಿ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂಬ ಭೇದಭಾವವಿಲ್ಲ. ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಪಕ್ಷ ಶ್ರಮಿಸಲಿದೆ. ಈಗಾಗಲೇ ಉತ್ತರ ಕರ್ನಾಟಕ ಭಾಗದಲ್ಲಿನ ನೆರೆ ಹಾವಳಿ ಕುರಿತು ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಪ್ರವಾಹ ಪೀಡಿತ ಪ್ರದೇಶಗಳ ಜನರಿಗೆ ಸರ್ಕಾರ ಸ್ಪಂದಿಸಲಿದೆ ಎಂದು ತಿಳಿಸಿದರು.
ಅತೃಪ್ತ ಶಾಸಕರೊಂದಿಗೆ ಬಿಜೆಪಿಯ ನಾಯಕರು ಮಾತನಾಡಿರುವುದು ನಿಜ ಆದರೆ, ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗುವುದಿಲ್ಲ. ಅತೃಪ್ತರು ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಲು ಸಮರ್ಥರಿದ್ದು, ಹೊಸ ಪಕ್ಷವನ್ನು ಹುಟ್ಟು ಹಾಕಲೂಬಹುದು ಎಂದರು.
ಇದೇ ವೇಳೆ, ಮಾಜಿ ಸಿಎಂ ಕುಮಾರಸ್ವಾಮಿ ಅವರ ರಾಜಕೀಯ ನಿವೃತ್ತಿಯ ಬಗ್ಗೆ ಪ್ರತಿಕ್ರಿಯಿಸಿದ ಶೆಟ್ಟರ್, ಮಾಜಿ ಪ್ರಧಾನಿ ದೇವೇಗೌಡ ಆ್ಯಂಡ್ ಕಂಪನಿಯ ಹೇಳಿಕೆಗಳನ್ನು ಯಾವುದೇ ರೀತಿ ಗಂಭೀರವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು.