ಧಾರವಾಡ : ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘ, ಜನಸಂಗ್ರಾಮ ಪರಿಷತ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ರೈತ ಸಂಘಟನೆ ಮುಖಂಡರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಮುಖ್ಯಮಂತ್ರಿಗಳು ರೈತ ವಿರೋಧಿ ನೀತಿ ಕೈಬಿಡಬೇಕು. ಹೊಸ ಕಾನೂನಿನ ಮೂಲಕ ಹಣವಂತರಿಗೆ ಮಣೆ ಹಾಕಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ತಿದ್ದುಪಡಿ ಕುರಿತು ಸಾರ್ವಜನಿಕವಾಗಿ ಚರ್ಚೆಗೆ ಅವಕಾಶ ನೀಡದೇ ಕಾಯ್ದೆ ತಿದ್ದುಪಡಿ ತಂದು ರೈತ ಕುಲಕ್ಕೆ ವಿಷ ಹಾಕಿ ನಿರ್ವಂಶ ಮಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಿದ್ದುಪಡಿ ಕೈಬಿಟ್ಟು ತಾವು ಹುಟ್ಟಿ ಬೆಳೆದು ಬಂದ ರೈತ ಸಮುದಾಯವನ್ನು ಉಳಿಸಲು ಮುಂದಾಗಬೇಕು, ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.